ದೂರವಾಣಿ ಕದ್ದಾಲಿಕೆ ಪ್ರಕರಣ; ಸಿಬಿಐ ತನಿಖೆಗೆ ವಹಿಸಲು ಸರ್ಕಾರ ನಿರ್ಧಾರ

ಬೆಂಗಳೂರು, ಆ 18              ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ನೇತೃತ್ವದ ಮೈತ್ರಿ ಸಕರ್ಾರದ ಅವಧಿಯಲ್ಲಿ ನಡೆದಿದೆ ಎನ್ನಲಾದ  ವಿಪಕ್ಷ ನಾಯಕರು ಹಾಗೂ ಹಿರಿಯ ಅಧಿಕಾರಿಗಳ ದೂರವಾಣಿ ಕದ್ದಾಲಿಕೆ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಲು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನಿರ್ಧರಿಸಿದ್ದಾರೆ.  ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೂರವಾಣಿ ಕದ್ದಾಲಿಕೆ ಒಂದು ಗಂಭೀರ ವಿಷಯ. ವಿಪಕ್ಷ ನಾಯಕ ಸಿದ್ದರಾಮಯ್ಯ ಸೇರಿದಂತೆ ಹಲವು ನಾಯಕ ಈ ಸಂಬಂಧ ಸಮಗ್ರ ತನಿಖೆಗೆ ಆಗ್ರಹಿಸಿದ್ದಾರೆ ಎಂದರು.  ರಾಜಕೀಯ ಎದುರಾಳಿಗಳ ದೂರವಾಣಿ ಕದ್ದಾಲಿಕೆ ಕಾನೂನುಬಾಹಿರವಾಗಿದ್ದು, ಇದರಲ್ಲಿ ಭಾಗಿಯಾದವರನ್ನು ಬಯಲಿಗೆಳೆದು ಶಿಕ್ಷೆ ವಿಧಿಸುವ ಅಗತ್ಯವಿದೆ. ಆದ್ದರಿಂದ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಲು ನಿರ್ಧರಿಸಲಾಗಿದೆ. ಈ ಸಂಬಂಧ ಸೋಮವಾರ ಅಧಿಕೃತ ಆದೇಶ ಹೊರಡಿಸಲಾಗುವುದು ಎಂದರು.  ಬಂಡಾಯ ಶಾಸಕರು ರಾಜೀನಾಮೆ ಸಲ್ಲಿಸಿದ ನಂತರ ಹಿಂದಿನ ಕಾಂಗ್ರೆಸ್ ಹಾಗೂ ಜೆಡಿಎಸ್ ಮೈತ್ರಿ ಸರ್ಕಾರ ಅಸ್ತಿತ್ವ ಉಳಿಸಿಕೊಳ್ಳಲು ಹಲವು ಆಡಳಿತ ಹಾಗೂ ವಿಪಕ್ಷ ನಾಯಕರ ದೂರವಾಣಿ ಸಂಭಾಷಣೆಯನ್ನು ಕದ್ದಾಲಿಸಿದ್ದಾರೆ ಎಂದು ಆರೋಪ ಕೇಳಿಬಂದಿತ್ತು.  ಈ ಸಂಬಂಧ ಸಮಗ್ರ ತನಿಖೆಯಾಗಬೇಕು ಎಂದು ಹಿರಿಯ ಬಿಜೆಪಿ ನಾಯಕ ಆರ್. ಅಶೋಕ ಹಾಗೂ ಕಾಂಗ್ರೆಸ್, ಜೆಡಿಎಸ್ ನ ಶಾಸಕರು ಬೇಡಿಕೆ ಮುಂದಿಟ್ಟಿದ್ದಾರೆ.  ಈ ನಡುವೆ, ಪ್ರಕರಣದ ತನಿಖೆ ನಡೆಸುವ ಮುಖ್ಯಮಂತ್ರಿಗಳ ನಿರ್ಧಾರವನ್ನು ಮಾಜಿ ಸಚಿವ ಹಾಗೂ ಜೆಡಿಎಸ್ ನ  ಅನರ್ಹ ಶಾಸಕ ಎಚ್. ವಿಶ್ವನಾಥ್ ಸ್ವಾಗತಿಸಿದ್ದಾರೆ.