ನವದೆಹಲಿ 16: ದೆಹಲಿ ರೈಲು ನಿಲ್ದಾಣದಲ್ಲಿ ಸಂಭವಿಸಿದ ಭೀಕರ ಕಾಲ್ತುಳಿತದಲ್ಲಿ 11 ಮಹಿಳೆಯರು ಮತ್ತು 4 ಮಕ್ಕಳು ಸೇರಿ ಒಟ್ಟು 18 ಮಂದಿ ಹಲವಾರು ಮಂದಿ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.
ದೆಹಲಿ ರೈಲು ನಿಲ್ದಾಣದ ಪ್ಲಾಟ್‌ಫಾರ್ಮ್ 14 ಮತ್ತು 15ರಿಂದ ಪ್ರಯಾಗರಾಜ್‌ಗೆ ತೆರಳಬೇಕಿದ್ದ ರೈಲುಗಳನ್ನು ರದ್ದುಗೊಳಿಸಿದ್ದರಿಂದ ಏಕಾಏಕಿ ನೂಕುನುಗ್ಗಲು ಉಂಟಾಗಿದ್ದು ಕಾಲ್ತುಳಿತಕ್ಕೆ ಕಾರಣ ಎನ್ನಲಾಗಿದೆ. ದೆಹಲಿ ರೈಲು ನಿಲ್ದಾಣದಿಂದ ಪ್ರಯಾಗ್ರಾಜ್ ಮಹಾ ಕುಂಭಮೇಳಕ್ಕೆ ರೈಲ್ವೆ ಇಲಾಖೆ ಎರಡು ವಿಶೇಷ ರೈಲುಗಳನ್ನು ವ್ಯವಸ್ಥೆ ಮಾಡಿದೆ. ಈ ಹಿನ್ನೆಲೆಯಲ್ಲಿ ಪ್ರಯಾಗ್ರಾಜ್ಗೆ ತೆರಳಲು ವಿವಿಧ ರಾಜ್ಯಗಳಿಂದ ಬಂದಿದ್ದ ನೂರಾರು ಪ್ರಯಾಣಿಕರು ನವದೆಹಲಿ ರೈಲು ನಿಲ್ದಾಣದೊಳಗೆ ನುಗ್ಗಿದ್ದಾರೆ.
ಪ್ಲಾಟ್‌ಫಾರ್ಮ್ ನಂಬರ್ 14 ಮತ್ತು 15ರಲ್ಲಿ ನಿಂತಿದ್ದ ಪ್ರಯಾಗ್ರಾಜ್ಗೆ ಹೊರಡುವ ವಿಶೇಷ ರೈಲಿನ ಜನರಲ್ ಬೋಗಿಗೆ ಹತ್ತುವಾಗ ನೂಕುನುಗ್ಗಲು ಸಂಭವಿಸಿ, ಕಾಲ್ತುಳಿತವಾಗಿದೆ.
ರೈಲ್ವೆ ಪೊಲೀಸರು ಮತ್ತು ದೆಹಲಿ ಪೊಲೀಸರು ನಿಲ್ದಾಣ ತಲುಪಿದ್ದಾರೆ. ಪರಿಸ್ಥಿತಿ ನಿಯಂತ್ರಣದಲ್ಲಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ಭಾರತೀಯ ರೈಲ್ವೆಯು ತಿಳಿಸಿದೆ.
ದೆಹಲಿ ರೈಲು ನಿಲ್ದಾಣದಲ್ಲಿ ಸಂಭವಿಸಿದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಭಾರತೀಯ ರೈಲ್ವೇ ಪರಿಹಾರ ಘೋಷಣೆ ಮಾಡಿದ್ದು, ಮೃತರ ಕುಟುಂಬಕ್ಕೆ 10 ಲಕ್ಷ ರೂ., ಗಂಭೀರವಾಗಿ ಗಾಯಗೊಂಡವರಿಗೆ 2.5 ಲಕ್ಷ ರೂ. ಮತ್ತು ಸಣ್ಣಪುಟ್ಟ ಗಾಯಗಳಾದವರಿಗೆ 1 ಲಕ್ಷ ರೂ. ಪರಿಹಾರ ನೀಡುವುದಾಗಿ ತಿಳಿಸಿದೆ.