ಕೊಪ್ಪಳ 18: ಕೊಪ್ಪಳ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ವಕೀಲರ ಸಂಘ, ಸಾರ್ವಜನಿಕ ಶಿಕ್ಷಣ ಇಲಾಖೆ ಇವರ ಸಯುಕ್ತಾಶ್ರಯದಲ್ಲಿ ಜನವರಿ. 17 ರಂದು ಹಮ್ಮಿಕೊಂಡಿದ್ದ "ಬಾಲ ನ್ಯಾಯ ಕಾಯ್ದೆ ಮತ್ತು ಪೋಕ್ಸೊ ಕಾಯ್ದೆ" ಕುರಿತು ವಿಶೇಷ ಕಾನೂನು ಅರಿವು-ನೆರವು ಕಾರ್ಯಕ್ರಮವು ಯಶಸ್ವಿಯಾಗಿ ಜರುಗಿತು.
ಕೊಪ್ಪಳ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಸದಸ್ಯ ಕಾರ್ಯದರ್ಶಿಗಳಾದ ಟಿ. ಶ್ರೀನಿವಾಸ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಮಕ್ಕಳಿಗೆ ಸಂಬಂಧಿಸಿದ ಕಾನೂನುಗಳಲ್ಲಿ ಬಾಲ ನ್ಯಾಯ ಕಾಯ್ದೆಯು ಅತ್ಯಂತ ಶಕ್ತಿಶಾಲಿಯಾಗಿದೆ. ಇತ್ತೀಚಿನ ದಿನಗಳಲ್ಲಿ ಹೆಣ್ಣು ಮಕ್ಕಳ ಮೇಲೆ ದೌರ್ಜನ್ಯ ಮತ್ತು ಅತ್ಯಾಚಾರ ಪ್ರಕರಣಗಳು ಹೆಚ್ಚುತ್ತಿವೆ. ಸಂತ್ರಸ್ತ ಮಗು ಮತ್ತು ಕುಟುಂಬಕ್ಕೆ ಸೂಕ್ತ ರಕ್ಷಣೆ, ಪೋಷಣೆ, ಕಾನೂನಿನ ನೆರವು ಮತ್ತು ಪುನರ್ವಸತಿ ಕಲ್ಪಿಸಲು ಪೋಕ್ಸೊ ಕಾಯ್ದೆ-2012ನ್ನು ಜಾರಿಗೆ ತರಲಾಗಿದ್ದು, ಈ ಕಾಯ್ದೆಯಡಿಯಲ್ಲಿ ಹೆಣ್ಣು ಮಕ್ಕಳಿಗೆ ಸಮಾಜದಲ್ಲಿ ಸೂಕ್ತ ರಕ್ಷಣೆ ಒದಗಿಸಲಾಗುತ್ತದೆ. ಇಷ್ಟೆಲ್ಲ ಕಠಿಣ ಕಾಯ್ದೆಗಳಿದ್ದರೂ ಸಹ ವರ್ಷದಿಂದ ವರ್ಷಕ್ಕೆ ಪೋಕ್ಸೋ ಕಾಯ್ದೆಯಡಿ ಪ್ರಕರಣಗಳು ಹೆಚ್ಚುತ್ತಿವೆ ಎಂದು ಕಳವಳ ವ್ಯಕ್ತಪಡಿಸಿದರು. ಕಾರ್ಯಕ್ರಮದಲ್ಲಿ ಮಕ್ಕಳ ವಿಶೇಷ ಪೋಲಿಸ್ ಘಟಕದ ಬಸಪ್ಪ ಹಾದಿಮನಿ ಇವರು ಮಕ್ಕಳ ಹಕ್ಕುಗಳ ಕುರಿತು ವಿಶೇಷ ಉಪನ್ಯಾಸ ನೀಡಿದರು. ಹಾಗೂ ವಕೀಲರಾದ ಸಾವಿತ್ರಿ ಮುಜಮದಾರ ಇವರು ಮಕ್ಕಳಿಗಾಗಿ ಇರುವ ವಿಶೇಷ ಅವಶ್ಯಕ ಕಾನೂನುಗಳ ಬಗ್ಗೆ ಮತ್ತು ಸಮಾಜದ ಸುವ್ಯವಸ್ಥೆ ಕಾಪಾಡುವಲ್ಲಿ ಮಹಿಳೆಯರ ಪಾತ್ರ ಹಾಗೂ ಮಹಿಳೆಯರ ಮೇಲೆ ಆಗುತ್ತಿರುವ ದೌರ್ಜನ್ಯಗಳನ್ನು ಯಾವ ರೀತಿಯಿಂದ ಎದುರಿಸಿ ರಕ್ಷಿಸಿಕೊಳ್ಳಬೇಕೆಂಬ ಕುರಿತು ವಿಶೇಷ ಉಪನ್ಯಾಸ ನೀಡಿದರು.
ಕೊಪ್ಪಳ ಬಾಲಕರ ಸರ್ಕಾರಿ ಪ್ರೌಢ ಶಾಲೆಯ ಪ್ರಾಂಶುಪಾಲರಾದ ಪ್ರಾಣೇಶ ಜಿ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ಕೊಪ್ಪಳ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಆಡಳಿತ ಸಹಾಯಕ ಶಿವಕುಮಾರ ಗೋನಾಳ ಹಾಗೂ ಬಾಲಕರ ಸರ್ಕಾರಿ ಪ್ರೌಢ ಶಾಲೆ ಶಿಕ್ಷಕರು ಹಾಗೂ ಇತರರು ಹಾಜರಿದ್ದರು.