ನವದೆಹಲಿ, ಆ 25 ಬಿಜೆಪಿ ಹಿರಿಯ ನಾಯಕ ಹಾಗೂ ಮಾಜಿ ಹಣಕಾಸು ಸಚಿವ ಅರುಣ್ ಜೇಟ್ಲಿ ಅವರ ಪಾರ್ಥಿವ ಶರೀರವನ್ನು ಅಂತ್ಯಕ್ರಿಯೆಗಾಗಿ ಇಲ್ಲಿನ ನಿಗಾಮ್ ಬೋಧ್ ಘಾಟ್ ಗೆ ತರಲಾಗಿದೆ. ಇನ್ನು ಕೆಲವೇ ಸಮಯದಲ್ಲಿ ಪಾರ್ಥಿವ ಶರೀರಕ್ಕೆ ಸಕಲ ಸರ್ಕಾರಿ ಗೌರವದೊಂದಿಗೆ ಅಂತ್ಯಕ್ರಿಯೆ ನಡೆಸಲಾಗುವುದು. 1967ರಲ್ಲಿ ಬಿಜೆಪಿಯ ಹಿರಿಯ ನಾಯಕ ಪಂಡಿತ್ ದೀನದಯಾಳ್ ಉಪಾಧ್ಯಾಯ್ ಅವರ ಅಂತ್ಯಸಂಸ್ಕಾರ ನಡೆಸಿದ ಜಾಗದಲ್ಲೇ ಅಂತ್ಯಕ್ರಿಯೆ ನಡೆಸಲಾಗುವುದು ಎಂದು ಬಿಜೆಪಿ ಮೂಲಗಳು ತಿಳಿಸಿವೆ. ಅನೇಕ ಹಿರಿಯ ಸಚಿವರು, ನಾಯಕರು ಹಾಗೂ ಪಕ್ಷದ ಕಾರ್ಯಕರ್ತರು ನಿಗಾಮ್ ಬೋಧ್ ನಲ್ಲಿ ಜೇಟ್ಲಿ ಅವರಿಗೆ ಅಂತಿಮ ನಮನ ಸಲ್ಲಿಸಲಿದ್ದಾರೆ. ಇದಕ್ಕೂ ಮುನ್ನ ಬಿಜೆಪಿ ಪ್ರಧಾನ ಕಚೇರಿಯಲ್ಲಿ ಅನೇಕ ನಾಯಕರು ಜೇಟ್ಲಿ ಅವರಿಗೆ ಗೌರವ ಸಲ್ಲಿಸಿದರು. ಕಳೆದ ಹಲವು ತಿಂಗಳಿಂದ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ 66 ವರ್ಷದ ಜೇಟ್ಲಿ ಶನಿವಾರ ಏಮ್ಸ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು. ಇವರನ್ನು ಆ 9ರಂದು ಆಸ್ಪತ್ರೆಗೆ ದಾಖಲಿಸಲಾಗಿತ್ತು.