ಗದಗ: ಸರ್ಕಾರದ ಸೌಲಭ್ಯಗಳು ಸಮಾಜದ ಕಟ್ಟಕಡೆಯ ಸಮುದಾಯಕ್ಕೆ ತಲುಪುವಂತಾಗಬೇಕು. ಸಮಾಜದಲ್ಲಿನ ತಾರತಮ್ಯವನ್ನು ಹೋಗಲಾಡಿಸಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದವರಿಗೆ , ಅಲ್ಪಸಂಖ್ಯಾತರು ಹಾಗೂ ಹಿಂದುಳಿದ ವರ್ಗಗಳಿಗೆ ಸರ್ಕಾರದಿಂದ ಜಾರಿಯಾಗಿರುವ ಯೋಜನೆಗಳ ಕುರಿತು ಅರಿವು ಮೂಡಿಸುವ ಕೆಲಸವನ್ನು ಇಲಾಖೆಯ ಅಧಿಕಾರಿಗಳು ಸಾರ್ವಜನಿಕರ ಸಹಭಾಗಿತ್ವದಲ್ಲಿ ಕೈಗೊಳ್ಳಬೇಕು ಎಂದು ಗದಗ ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಅವರು ತಿಳಿಸಿದರು.
ಗದಗ ಜಿಲ್ಲಾಡಳಿತ ಭವನದ ಕೊಠಡಿ ಸಂಖ್ಯೆ 122 ರಲ್ಲಿಂದು ಮೈಸೂರಿನ ಆಡಳಿತ ತರಬೇತಿ ಸಂಸ್ಥೆಯ ಸಾಮಾಜಿಕ ನ್ಯಾಯ ಮತ್ತು ಸಮಾನತೆ ಕೇಂದ್ರ , ಗದಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಗದಗ ಜಿಲ್ಲಾ ತರಬೇತಿ ಸಂಸ್ಥೆಯ ಸಹಯೋಗದಲ್ಲಿ ಜಿಲ್ಲೆಯ ವಿವಿಧ ಇಲಾಖೆಗಳ ಗ್ರುಪ್ ಸಿ ವೃಂದದ ಸಿಬ್ಬಂದಿಗಳಿಗೆ ಸಾಮಾಜಿಕ ನ್ಯಾಯ ಮತ್ತು ಸಮಾನತೆ ತರಬೇತಿ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಖಾಜಾ ಹುಸೇನ ಮುಧೋಳ ಅವರು ಮಾತನಾಡಿ ಗ್ರಾಮೀಣ ಪ್ರದೇಶದಲ್ಲಿ ಅಸ್ಪೃಶ್ಯತೆ ಹೋಗಲಾಡಿಸಿ ಸಮಾಜದಲ್ಲಿನ ಅನಿಷ್ಟ ಪದ್ಧತಿಗಳನ್ನು ನಿರ್ಮೂಲನೆ ಮಾಡಲು ಇಲಾಖೆಯ ಅಧಿಕಾರಿ ಹಾಗೂ ಸಿಬ್ಬಂದಿಗಳು ಕಾರ್ಯನಿರ್ವಹಿಸಬೇಕು. ಹಿಂದುಳಿದ, ಮಹಿಳಾ, ಅಲ್ಪಸಂಖ್ಯಾತರು, ಸಮಾಜ ಕಲ್ಯಾಣ ಸೇರಿದಂತೆ ವಿವಿಧ ಇಲಾಖೆಯ ಸಿಬ್ಬಂದಿಗಳು ಈ ಕಾರ್ಯಾಗಾರದ ಸದುಪಯೋಗ ಪಡಿಸಿಕೊಳ್ಳಬೇಕೆಂದು ಖಾಜಾ ಹುಸೇನ ಮುಧೋಳ ತಿಳಿಸಿದರು.
ಮೈಸೂರಿನ ತರಬೇತಿ ನಿರ್ದೇಶಕರಾದ ರವಿಕುಮಾರ್ ಅವರು ಪ್ರಾಸ್ತಾವಿಕವಾಗಿ ಮಾತನಾಡಿ ಆಡಳಿತ ತರಬೇತಿ ಸಂಸ್ಥೆಯಿಂದ ಸಮಾಜ ಕಲ್ಯಾಣ ಇಲಾಖೆಯ ವಿವಿಧ ಕಾರ್ಯಕ್ರಮಗಳಿಗೆ ಅನುದಾನ ಬಿಡುಗಡೆಯಾಗುತ್ತಿದ್ದು ಸಕರ್ಾರದ ಸೌಲಭ್ಯಗಳ ಕುರಿತು ದುರ್ಬಲ ಜನರಿಗೆ ಅರಿವು ಮೂಡಿಸುವುದೇ ಇದರ ಉದ್ದೇಶವಾಗಿದೆ. ಜಿಲ್ಲೆಯಲ್ಲಿ ಈ ತರಬೇತಿ ಇಂದಿನಿಂದ ಪ್ರಾರಂಭವಾಗಿದ್ದು ಮೂರು ದಿನಗಳ ಕಾಲ ನಡೆಯಲಿದೆ ಎಂದು ತಿಳಿಸಿದರು.
ಜಿಲ್ಲಾ ತರಬೇತಿ ಸಂಸ್ಥೆಯ ಪ್ರಭಾರಿ ಪ್ರಾಚಾರ್ಯರಾದ ಎ.ಎ. ಕಂಬಾಳಿಮಠ ಸರ್ವರನ್ನು ಸ್ವಾಗತಿಸಿದರು. ವಿವಿಧ ಇಲಾಖೆಯ ಗ್ರುಪ್ ಸಿ ವೃಂದದವರು, ತರಬೇತಿ ಸಂಸ್ಥೆಯ ಸಿಬ್ಬಂದಿಗಳು ತರಬೇತಿಯಲ್ಲಿ ಉಪಸ್ಥಿತರಿದ್ದರು.