ಹಿಂದಿ ಹೇರಿಕೆಗೆ ಕನ್ನಡದ ಮಕ್ಕಳ ಭವಿಷ್ಯ ಬಲಿ: ಬಿ.ಗೀರೀಶಾನಂದ

ಹಿಂದಿ ಹೇರಿಕೆಗೆ ಕನ್ನಡದ ಮಕ್ಕಳ ಭವಿಷ್ಯ ಬಲಿ: ಬಿ.ಗೀರೀಶಾನಂದ The future of Kannada children is a sacrifice to the imposition of Hindi: B. Geerishananda

ದ್ವಿಭಾಷಾ ನೀತಿ ಜಾರಿಯಾಗಲಿಽ  

ಕೊಪ್ಪಳ,ಜು.05: ರಾಜ್ಯದ ಪಠ್ಯಕ್ರಮದಲ್ಲಿ ಸಾಧಾರಣೆಯಾಗಿ ಕನ್ನಡವನ್ನು ಪ್ರಥಮ ಭಾಷೆಯಾಗಿ, ಇಂಗ್ಲೀಷನ್ನು ದ್ವಿತೀಯವಾಗಿ ಮತ್ತು ತೃತೀಯ ಭಾಷೆಯನ್ನಾಗಿ ಹಿಂದಿಯನ್ನು ಕಲಿಸಲಾಗುತ್ತಿದೆ. ಪಠ್ಯಕ್ರಮದಲ್ಲಿ ಓದುವ ಮಕ್ಕಳು ಮೂರನೇ ಭಾಷೆಯನ್ನಾಗಿ ಹಿಂದಿಯನ್ನು ಕಲಿಯುವುದು ಕಡ್ಡಾಯವಾಗಿದೆ. ಮಾತ್ರವಲ್ಲದೇ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ನೂರು ಅಂಕಗಳಿಗೆ ಹಿಂದಿ ಪರೀಕ್ಷೆಯನ್ನು ಕಡ್ಡಾಯವಾಗಿರುವುದು ವಿದ್ಯಾರ್ಥಿಗಳಿಗೆ ಅನಗತ್ಯವಾದ ಒತ್ತಡವನ್ನು ಒಡ್ಡುತ್ತಿದೆ ಎಂದು ಕರವೇ ಜಿಲ್ಲಾಧ್ಯಕ್ಷ ಬಿ.ಗೀರೀಶಾನಂದ ಜ್ಞಾನಸುಂದರ ಹೇಳಿದರು. 

ಶನಿವಾರದಂದು ರಾಜ್ಯದ ಶಿಕ್ಷಣ ವ್ಯವಸ್ಥೆಯಲ್ಲಿ ದ್ವಿಭಾಷಾ ನೀತಿ ಜಾರಿಗೆ ತರಲು ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆ ಕೊಪ್ಪಳ ಜಿಲ್ಲಾ ಘಟದಿಂದ ಜಿಲ್ಲಾಧಿಕಾರಿಗಳ ಕಛೇರಿ ಮುಂದೆ ಪ್ರತಿಭಟಿಸಿ ಜಿಲ್ಲಾಧಿಕಾರಿಗಳ ಮುಖಾಂತರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಿ ಮಾತನಾಡಿದರು. 

2024 ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ 90.794 ವಿದ್ಯಾರ್ಥಿಗಳು ತೃತೀಯ ಭಾಷೆಯಾದ ಹಿಂದಿಯಲ್ಲಿ ಅನುತ್ತೀರ್ಣರಾಗಿದ್ದಾರೆ. ಇದು ಒಟ್ಟು ವಿದ್ಯಾರ್ಥಿಗಳಲ್ಲಿ ಸು.21ಅ ರಷ್ಟಿದೆ. 2025ರಲ್ಲಿ ಈ ಸಂಖ್ಯೆ 1.2 ಲಕ್ಷಕ್ಕಿಂತ ಹೆಚ್ಚಾಗಿದೆ ಎಂದು ಇತ್ತೀಚಿನ ವರದಿಗಳು ತಿಳಿಸಿವೆ. ಇದು ಅತ್ಯಂತ ಆಘಾತಕಾರಿ ಬೆಳವಣಿಗೆಯಾಗಿದ್ದು, ಇದು ಹಿಂದಿಯ ಕಡ್ಡಾಯದಿಂದ ವಿದ್ಯಾರ್ಥಿಗಳಿಗೆ ಉಂಟಾಗುತ್ತಿರುವ ಶೈಕ್ಷಣಿಕ ಹೊರೆಯನ್ನು ಸ್ಪಷ್ಟವಾಗಿ ತೋರುತ್ತಿದೆ. ಹಿಂದಿ ಹೇರಿಕೆಗೆ ಕನ್ನಡದ ಮಕ್ಕಳ ಭವಿಷ್ಯ ಬಲಿಯಾಗುತ್ತಿದೆ. ತ್ರಿಭಾಷಾ ಸೂತ್ರದ ಕುರಿತು ರಾಷ್ಟ್ರಕವಿ ಕುವೆಂಪು ಅವರು ಹಿಂದೆಯೇ ತೀಕ್ಷ-್ಣವಾದ ವಿರೋಧವನ್ನು ಸಾರಿದ್ದರು.  

ಭಾಷಾ ತ್ರಿಶೂಲವೀ ತ್ರಿಭಾಷಾ ಸೂತ್ರ. 

ಬಾಲಕರ ರಕ್ಷಸೈ, ಹೇ ತ್ರಿಣೇತ್ರಽ 

ಚೂರು ತಿಂಡಿಗೆ ಸಿಕ್ಕಿಸಿಹರೊ ಈ ಮೂರು ಗಾಳ. 

ನುಂಗದಿದ್ದರೆ ಹಸಿವೆ; ನುಂಗಿದರೆ ಪ್ರಾಣ ಶೂಲಽಽ. ಕುವೆಂಪು. 

ಕರ್ನಾಟಕದ ಸಾಂಕೃತಿಕ ಮತ್ತು ಭಾಷಿಕ ಅಸ್ಮಿತೆಯಲ್ಲಿ ಈ ನೆಲದ ನುಡಿಯಾದ ಕನ್ನಡವು ಕೇಂದ್ರ ಸ್ಥಾನವನ್ನು ಹೊಂದಿದೆ. ಬದಲಾದ ಕಾಲಘಟ್ಟದಲ್ಲಿ ಇಂಗ್ಲೀಷ್ ಭಾಷೆಯು ಜಾಗತಿಕ ವ್ಯವಹಾರಗಳಿಗೆ, ಉನ್ನತ ಶಿಕ್ಷಣ ಮತ್ತು ವೃತ್ತಿ ನಿರ್ವಹಣೆಗೆ ಅಗತ್ಯವಾಗಿದ್ದು, ಇದನ್ನು ಕಲಿಯುವುದು ವಿದ್ಯಾರ್ಥಿಗಳ ಭವಿಷ್ಯಕ್ಕೆ ಪೂರಕವಾಗಿದೆ. ಆದರೆ ಹಿಂದಿಯನ್ನು ಕಡ್ಡಾಯವಾಗಿ ಓದಿಸುವುದರಿಂದ ರಾಜ್ಯದ ವಿದ್ಯಾರ್ಥಿಗಳಿಗೆ ಯಾವುದೇ ಗಮನಾರ್ಹ ಲಾಭವಿಲ್ಲ. ತ್ರಿಭಾಷಾ ನೀತಿಯಿಂದ ಕರ್ನಾಟಕಕ್ಕೆ ಯಾವ ಲಾಭವೂ ಇಲ್ಲ. ಇದರಿಂದ ಒಬ್ಬನೇ ಒಬ್ಬ ಕನ್ನಡಿಗನಿಗೂ ಉದ್ಯೋಗ ದೊರೆತಿಲ್ಲ.  

ತಮಿಳುನಾಡು 1968ರಿಂದಲೇ ತ್ರಿಭಾಷಾ ನೀತಿಯನ್ನು ತಿರಸ್ಕರಿಸಿ, ತಮಿಳು ಮತ್ತು ಇಂಗ್ಲೀಷ್ ಬಾಷೆಗಳನ್ನು ಒಳಗೊಂಡ ದ್ವಿಭಾಷಾ ನೀತಿಯನ್ನು ಯಶಸ್ವಿಯಾಗಿ ಜಾರಿಗೆ ತಂದಿದೆ. ಇತ್ತೀಚೆಗೆ ಮಹಾರಾಷ್ಟ್ರ ಸರ್ಕಾರವು ಸಹ ತ್ರಿಭಾಷಾ ನೀತಿಯನ್ನು ರದ್ದುಗೊಳಿಸಿ, ಮರಾಠಿ ಹಾಗೂ ಇಂಗ್ಲೀಷ್ ಭಾಷೆಯನ್ನು ಕಡ್ಡಾಯಗೊಳಿಸುವ ನಿರ್ಧಾರವನ್ನು ಕೈಗೊಂಡಿದೆ. ಈ ರಾಜ್ಯಗಳು ತಮ್ಮ ಭಾಷಿಕ ಗುರುತುಗಳನ್ನು ರಕ್ಷಿಸುವುದರ ಜೋತೆಗೆ ಶೈಕ್ಷಣಿಕ ಗುಣಮಟ್ಟವನ್ನು ಕಾಪಾಡಿಕೊಂಡಿವೆ. ಕರ್ನಾಟಕವು ಈ ಉದಾಹಣೆಗಳಿಂದ ಸ್ಪೂರ್ತಿಪಡೆದು, ಕನ್ನಡ ಮತ್ತು ಇಂಗ್ಲೀಷ್ ಭಾಷೆಗಳಿಗೆ ಆದ್ಯತೆ ನೀಡುವ ದ್ವಿಭಾಷಾ ನೀತಿಯನ್ನು ಜಾರಿಗೆ ತರಬೇಕಾಗಿದೆ. 

ರಾಜ್ಯದ ಪಠ್ಯಕ್ರಮದಲ್ಲಿ ವಿದ್ಯಾರ್ಥಿಗಳು ಐದು ವಿಷಯಗಳನ್ನು (ಮೂರು ವಿಷಯಗಳು ಮತ್ತು ಎರಡು ಭಾಷೆಗಳು) ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಬರೆಯುತ್ತಾರೆ. ಆದರೆ ತೃತೀಯ ಭಾಷೆಯಾದ ಹಿಂದಿಯನ್ನು ಕಡ್ಡಾಯವಾಗಿ ಓದಬೇಕಾದ ಒತ್ತಡವು ವಿದ್ಯಾರ್ಥಿಗಳಿಗೆ ಅನಗತ್ಯ ಹೊರೆಯಾಗಿದೆ. ಇದಕ್ಕೆ ವ್ಯತಿರಿಕ್ತವಾಗಿ ಕೇಂದ್ರೀಯ ಶಿಕ್ಷಣ ವ್ಯವಸ್ಥೆಯಾದ ಸಿಬಿಎಸ್‌ಇ ಮತ್ತು ಐಸಿಎಸ್‌ಇ ಶಾಲೆಗಲ್ಲಿ ಕೇವಲ ಎರಡು ಭಾಷೆಗಳನ್ನು ಕಡ್ಡಾಯವಾಗಿ ಓದಿಸಲಾಗುತ್ತಿದೆ. ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಎರಡು ಭಾಷೆಗಳಲ್ಲಿ ಮಾತ್ರ ಪರೀಕ್ಷೆಗಳನ್ನು ನಡೆಸಲಾಗುತ್ತಿದೆ. ಈ ತಾರತಮ್ಯವು ರಾಜ್ಯ ಪಠ್ಯಕ್ರಮದ ವಿದ್ಯಾರ್ಥಿಗಳಿಗೆ ಅನ್ಯಾಯವನ್ನುಂಟುಮಾಡುತ್ತಿದೆ. ಇದರಿಂದಾಗಿ ಕನ್ನಡ ಮಾಧ್ಯಮದ ವಿದ್ಯಾರ್ಥಿಗಳು ಗಣಿತ, ವಿಜ್ಞಾನ ಮುಂತಾದ ವಿಷಯಗಳಿಗೆ ಹೆಚ್ಚಿನ ಸಮಯ ನೀಡಲು ವಿಫಲರಾಗುತ್ತಿದ್ದಾರೆ. ಈ ಅಸಮಾನತೆಯನ್ನು ಸಹ ರಾಜ್ಯ ಸರ್ಕಾರ ಗಂಭೀರವಾಗಿ ಗಮನಿಸಬೇಕಿದೆ.  

ನಮ್ಮ ಹಕ್ಕೊತ್ತಾಯಗಳು: ಕರ್ನಾಟಕದ ಶಾಲೆಗಳಲ್ಲಿ ಕನ್ನಡ ಮತ್ತು ಇಂಗ್ಲೀಷ್ ಭಾಷೆಗಳನ್ನು ಕಡ್ಡಾಯಗೊಳಿಸುವ ದ್ವಿಭಾಷಾ ನೀತಿಯನ್ನು ಜಾರಿಗೆ ತರಬೇಕು. ತೃತೀಯ ಭಾಷೆಯಾದ ಹಿಂದಿಯನ್ನು ಪಠ್ಯದಿಂದ ಹೊರಗಿಡಬೇಕು. ಸಿಬಿಎಸ್‌ಇ ಮತ್ತು ಐಸಿಎಸ್‌ಇ ಶಾಲೆಗಲ್ಲಿ ಪ್ರಥಮ ಭಾಷೆಯನ್ನಾಗಿ ಕನ್ನಡವನ್ನೇ ಕಡ್ಡಾಯಗೊಳಿಸಬೇಕು. ರಾಜ್ಯ ಮತ್ತು ಕೇಂದ್ರೀಯ ಶಿಕ್ಷಣ ವ್ಯವಸ್ಥೆಗಳಾದ ಸಿಬಿಎಸ್‌ಇ ಮತ್ತು ಐಸಿಎಸ್‌ಇ ಶಾಲೆಗಲ್ಲಿ ಏಕರೂಪದ ದ್ವಿಭಾಷಾ ನೀತಿಯನ್ನು ಜಾರಿಗೊಳಿಸಬೇಕು. ಕನ್ನಡ ಮಾಧ್ಯಮ ಶಾಲೆಗಳನ್ನು ಬಲಪಡಿಸಿ ಉತ್ತಮ ಗುಣಮಟ್ಟದ ಇಂಗ್ಲೀಷ್ ಶಿಕ್ಷಣವನ್ನು ನೀಡಬೇಕು. 

ಪ್ರತಿಭಟನೆಯಲ್ಲಿ ರಾಜ್ಯ ಸಂಘಟನಾ ಕಾರ್ಯದರ್ಶಿ ಬಸನಗೌಡ ಪೋ.ಪಾಟೀಲ, ಹಿರಿಯ ಸಾಹಿತಿ ಮಹಾಂತೇಶ ಮಲ್ಲನಗೌಡರ, ಜಿಲ್ಲಾ ಮಹಿಳಾ ಅಧ್ಯಕ್ಷೆ ಭುವನೇಶ್ವರಿ ಮೊಟಗಿ, ಮಹಿಳಾ ಅಧ್ಯಕ್ಷರಾದ ಶಂಕ್ರಮ್ಮ ಗೋರೆಬಾಳ, ಸಾವಿತ್ರಿ ದಳವಾಯಿ, ಜಿಲ್ಲಾ ಉಪಾಧ್ಯಕ್ಷ ಶಿವನಗೌಡ ಪಾಟೀಲ ಹಲಗೇರಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ನಿಂಗಪ್ಪ ಮೂಗಿನ್, ಕುಷ್ಟಗಿ ತಾಲೂಕಾಧ್ಯಕ್ಷ ಪ್ರಕಾಶ ಮನ್ನೆರಾಳ, ಕುಕನೂರು ತಾಲೂಕಾಧ್ಯಕ್ಷ ರಮೇಶ ಚಂಡೂರು, ಭಾಗ್ಯನಗರ ಅಧ್ಯಕ್ಷ ವಿರೇಶ ಮುಂಡಾಸದ, ಕೊಪ್ಪಳ ನಗರ ಅಧ್ಯಕ್ಷ ಪ್ರಫುಲ್‌ಕುಮಾರ ಪಾಟೀಲ, ಜಿಲ್ಲಾ ಸಾಮಾಜಿಕ ಜಾಲಜಾಣ ಸಂಚಾಲಕ ಸಿದ್ದು ಸಶಿಮಠ ಕರವೇ ಮುಖಂಡರಾದ ದೇವೆಂದ್ರ ಆನೆಗುಂದಿ, ಶಿವಕುಮಾರ ಬಂಗಾರಿ, ರಾಘವೇಂದ್ರ ಕೋಣಿ, ಎನ್ ದೊಡ್ಡಬಸಪ್ಪ, ಶರಣಪ್ಪ ನವಲಹಳ್ಳಿ, ವೆಂಕಟೇಶ ತಟ್ಟಿ, ಎಮ್‌.ಕೆ ಮನಗೂಳಿ, ಶರಣಯ್ಯ ಕುಟಗನಳ್ಳಿ, ಮಾರುತಿ ಎಮ್, ಪ್ರಕಾಶ ಜೋಷಿ, ಹನುಮಂತ ಜೀರಾಳ, ಮಹೇಶ ಜಂತ್ಲಿ ಹಾಗೂ ಅನೇಕರು ಭಾಗವಹಿಸಿದ್ದರು. 

ತಮಿಳುನಾಡು ಮತ್ತು ಮಹಾರಾಷ್ಟ್ರದಂತಹ ರಾಜ್ಯಗಳ ದ್ವಿಭಾಷಾ ನೀತಿಯನ್ನು ಅನುಸರಿಸುವ ಮೂಲಕ ಕರ್ನಾಟಕವು ತನ್ನ ಭಾಷಿಕ ಗುರುತನ್ನು ರಕ್ಷಿಸಬೇಕು. ಈ ನಿಟ್ಟಿನಲ್ಲಿ ತಕ್ಷಣದ ಕ್ರಮವನ್ನು ಕೈಕೊಳ್ಳಬೇಕು. ್ಷಬಿ.ಗೀರೀಶಾನಂದ ಕರವೇ ಜಿಲ್ಲಾಧ್ಯಕ್ಷರು.