ಪಾಲ್ಘರ್‌ನಲ್ಲಿ ಗೋದಾಮಿನ ಗೋಡೆ ಕುಸಿದು ಮೂವರು ಕಾರ್ಮಿಕರು ಸಾವು

ಪಾಲ್ಘರ್‌ನಲ್ಲಿ ಗೋದಾಮಿನ ಗೋಡೆ ಕುಸಿದು ಮೂವರು ಕಾರ್ಮಿಕರು ಸಾವು Three Workers Killed as Storeroom Wall Collapses in Palghar

ಪಾಲ್ಘರ್, ಸೆ. 24: ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ಟೀನಾ ರಬ್ಬರ್ ಕಂಪನಿಯ ಗೋದಾಮಿನ ಗೋಡೆಯೊಂದು ಕುಸಿದು ಬಿದ್ದ ಪರಿಣಾಮ ಇಬ್ಬರು ಮಹಿಳೆಯರು ಸೇರಿದಂತೆ ಮೂವರು ಕಾರ್ಮಿಕರು ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಮೃತರನ್ನು ಕೇಶವ್ ಗುಂಗುನಾ, ರಂಜನಾ ಕೊಂಬ್ ಮತ್ತು ಮೀರಾ ಗಾವಳಿ ಎಂದು ಗುರುತಿಸಲಾಗಿದೆ ಎಂದು ವರದಿಗಳು ತಿಳಿಸಿವೆ.

ಮೂವರು ಕಾರ್ಮಿಕರು ಗೋದಾಮಿನ ಸಮೀಪ ಕುಳಿತು ಬೆಳಗಿನ ಉಪಾಹಾರ ಸೇವಿಸುತ್ತಿದ್ದ ವೇಳೆ ಗೋಡೆ ಏಕಾಏಕಿ ಕುಸಿದು ಬಿದ್ದಿದೆ. ಪರಿಣಾಮ ಗೋಡೆಯ ಅವಶೇಷಗಳಡಿ ಸಿಲುಕಿಕೊಂಡು ಅವರು ಮೃತಪಟ್ಟಿದ್ದಾರೆ.

ಘಟನೆಯ ಮಾಹಿತಿ ದೊರೆತ ತಕ್ಷಣ ವಾಡಾ ಪೊಲೀಸರು ಸ್ಥಳಕ್ಕೆ ಧಾವಿಸಿ ತನಿಖೆ ಆರಂಭಿಸಿದರು. ಅವಶೇಷಗಳಡಿ ಸಿಲುಕಿದ್ದ ಮೃತದೇಹಗಳನ್ನು ಹೊರತೆಗೆಯಲಾಯಿತು.

ಗೋಡೆ ಕುಸಿಯಲು ಕಾರಣವೇನು ಎಂಬುದರ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಗೋದಾಮು ಹಾಗೂ ಸುತ್ತಮುತ್ತಲಿನ ಕಟ್ಟಡಗಳ ಸ್ಥಿತಿಗತಿ ಸೇರಿದಂತೆ ಸ್ಥಳದಲ್ಲಿ ಅಗತ್ಯ ರಚನಾತ್ಮಕ ಮತ್ತು ಕಾರ್ಮಿಕರ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಲಾಗಿತ್ತೇ ಎಂಬುದನ್ನೂ ಪರಿಶೀಲಿಸಲಾಗುತ್ತಿದೆ.

ಗೋಡೆ ಕುಸಿತಕ್ಕೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ. ಪ್ರಕರಣದ ತನಿಖೆ ಮುಂದುವರಿದಿದ್ದು, ಹೆಚ್ಚಿನ ವಿವರಗಳಿಗಾಗಿ ಪೊಲೀಸರು ಕಾಯುತ್ತಿದ್ದಾರೆ.