ನಾಳೆ ಕನಕದಾಸರ 532ನೇ ಜಯಂತ್ಯುತ್ಸವ

ಬೆಂಗಳೂರು, ಡಿ.28, ಸಂತ ಕವಿ ಕನಕದಾಸರ 532ನೇ ಜಯಂತ್ಯುತ್ಸವ ಹಾಗೂ ರಾಜ್ಯ ನೌಕರರ ಮತ್ತು ಕಾರ್ಮಿಕರ ಕೇಂದ್ರ ಕನಕ ಸಮಿತಿಯ ರಜತ ಮಹೋತ್ಸವ ಕಾರ್ಯಕ್ರಮವನ್ನು ಡಿ.29 ರಂದು ವಿಶ್ವೇಶ್ವರಯ್ಯ ಬಡಾವಣೆಯಲ್ಲಿರುವ ಕನಕ ಸಂಕೀರ್ಣದಲ್ಲಿ ಬೆಳಗ್ಗೆ 10 ಗಂಟೆಗೆ ಆಯೋಜಿಸಲಾಗಿದೆ ಎಂದು ಸಮಿತಿಯ ಗೌರವಾಧ್ಯಕ್ಷ ಹಾಗೂ ಮಾಜಿ ಸಚಿವ ಎಚ್.ಎಂ.ರೇವಣ್ಣ ತಿಳಿಸಿದ್ದಾರೆ.ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯ ನೌಕರರ ಮತ್ತು ಕಾರ್ಮಿಕರ ಕೇಂದ್ರ ಕನಕ ಸಮಿತಿಯು 25 ವರ್ಷಗಳನ್ನು ಪೂರೈಸಿದ್ದು, ಈ ಹಿನ್ನೆಲೆಯಲ್ಲಿ ಸಂಘದ ರಜತ ಮಹೋತ್ಸವ ಹಾಗೂ ಕನಕ‌ದಾಸರ ಜಯಂತಿಯನ್ನು ಆಚರಿಸಲಾಗುತ್ತಿದೆ ಎಂದರು. ಕಾಗಿನೆಲೆ ಮಹಾ ಸಂಸ್ಥಾನದ ಕನಕ ಗುರುಪೀಠದ ಈಶ್ವರಾನಂದಪುರಿ ಸ್ವಾಮಿಗಳ ದಿವ್ಯ ಸಾನಿಧ್ಯದಲ್ಲಿ,  ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದು, ವಿಧಾನ ಪರಿಷತ್ ಸದಸ್ಯ ಎಚ್.ಎಂ.ರೇವಣ್ಣ ಅಧ್ಯಕ್ಷತೆ ವಹಿಸಲಿದ್ದಾರೆ. ಶಾಸಕರಾದ ಬಂಡೆಪ್ಪ ಕಾಶೆಂಪೂರ್, ಬಿ.ಎ.ಬಸವರಾಜು, ಬಿ.ಎಸ್ ಸುರೇಶ್, ಎಸ್.ರಾಮಪ್ಪ, ಡಾ.ಯತೀಂದ್ರ ಸಿದ್ದರಾಮಯ್ಯ ಮತ್ತಿತರರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದು ಅವರು ತಿಳಿಸಿದರು.ಕಾರ್ಯಕ್ರಮದಲ್ಲಿ ಮಾಜಿ ಸಚಿವ ಎಚ್.ವಿಶ್ವನಾಥ್ ಸ್ಮರಣ ಸಂಚಿಕೆ ಬಿಡುಗಡೆ ಮಾಡಲಿದ್ದು, ಈ ಸಂದರ್ಭದಲ್ಲಿ  ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ಕನಕದಾಸರ ಕೀರ್ತನೆಗಳ ಗಾಯನ ಕಾರ್ಯಕ್ರಮ ನಡೆಯಲಿದೆ ಎಂದು ವಿವರಿಸಿದರು.