ನವದೆಹಲಿ, ಆ 17 ರಾಜ್ಯ ಸಚಿವ ಸಂಪುಟ ವಿಸ್ತರಣೆ ಸಂಬಂಧ ಪಕ್ಷದ ಅಧ್ಯಕ್ಷ ಅಮಿತ್ ಷಾ ಜತೆ ಇಂದು ಮಾತುಕತೆ ನಡೆಸಿ ಅಂತಿಮಗೊಳಿಸಲಾಗುವುದು. ಭಾನುವಾರ ಅಥವಾ ಸೋಮವಾರ ಸಂಪುಟ ವಿಸ್ತರಣೆಯಾಗಲಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ. ದೆಹಲಿ ಪ್ರವಾಸದಲ್ಲಿರುವ ಅವರು ಇಂದು ಬೆಳಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿ, ರಾಜ್ಯದಲ್ಲಿ ಉಂಟಾಗಿರುವ ಪ್ರವಾಹದ ಪರಿಹಾರ ಕಾರ್ಯ ವಿಚಾರದಲ್ಲಿ ಕಾಂಗ್ರೆಸ್ ನಾಯಕರು ಅನಗತ್ಯ ರಾಜಕೀಯ ಮಾಡುತ್ತಿದ್ದಾರೆ. ಕಾಂಗ್ರೆಸ್ ನಾಯಕರು ತಲೆತಿರುಕರು. ಹಾಗಾಗಿ ಈ ರೀತಿ ಆರೋಪ ಮಾಡುತ್ತಿದ್ದಾರೆ. ಈಗಾಗಲೇ ಪ್ರಧಾನಿ ಅವರಿಗೆ ರಾಜ್ಯದ ಪರಿಸ್ಥಿತಿ ವಿವರಿಸಲಾಗಿದೆ. ಶೀಘ್ರ ನಮಗೆ ಪರಿಹಾರ ದೊರೆಯುವ ವಿಶ್ವಾಸವಿದೆ. ಈ ವೇಳೆ ರಾಜಕೀಯ ಮಾಡುವುದು ಸರಿಯಲ್ಲ ಎಂದು ಹೇಳಿದರು. ಕೇಂದ್ರ ಸರ್ಕಾರ ಎಷ್ಟು ಹಣ ಬಿಡುಗಡೆ ಮಾಡಲಿದೆ ಎಂಬ ಮಾಹಿತಿ ಇಲ್ಲ. ಆದರೆ ಒಟ್ಟಾರೆ ನಮಗೆ ಸಂಪೂರ್ಣ ನೆರವು ದೊರೆಯುವ ವಿಶ್ವಾಸವಿದೆ ಎಂದು ಹೇಳಿದರು. ಕೇಂದ್ರ ಗುಪ್ತಚರ ಇಲಾಖೆ ಸೂಚನೆ ಮೇರೆಗೆ ರಾಜ್ಯದಲ್ಲಿ ಹೈಅಲರ್ಟ್ ಘೋಷಿಸಲಾಗಿದೆ. ಪೊಲೀಸ್ ಇಲಾಖೆ ಕಟ್ಟೆಚ್ಚರ ವಹಿಸಿದ್ದು, ಜನತೆ ಆತಂಕಪಡುವ ಅಗತ್ಯವಿಲ್ಲ ಎಂದು ಹೇಳಿದರು. ಗುರುವಾರ ರಾತ್ರಿ ದೆಹಲಿಗೆ ಭೇಟಿ ನೀಡಿರುವ ಮುಖ್ಯಮಂತ್ರಿ ಯಡಿಯೂರಪ್ಪ ಪ್ರಧಾನಿ ಸೇರಿದಂತೆ ಹಲವು ಕೇಂದ್ರ ಸಚಿವರನ್ನು ಭೇಟಿ ಮಾಡಿ ರಾಜ್ಯದ ಅಭಿವೃದ್ಧಿ ಕಾರ್ಯಗಳ ಬಗ್ಗೆ ಚರ್ಚಿಸಿದ್ದಾರೆ. ನಿನ್ನೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ಪ್ರವಾಹ ಪರಿಸ್ಥಿತಿಯ ಬಗ್ಗೆ ಸಂಪೂರ್ಣ ವಿವರ ನೀಡಿ, ತಕ್ಷಣ ಮಧ್ಯಂತರ ಪರಿಹಾರ ಬಿಡುಗಡೆ ಮಾಡುವಂತೆ ಒತ್ತಾಯಿಸಿದ್ದರು. ರೈಲ್ವೆ ಸಚಿವ ಪಿಯೂಷ್ ಗೋಯಲ್, ವಿಮಾನಯಾನ ರಾಜ್ಯ ಸಚಿವ ಹರ್ದಿಪ್ ಸಿಂಗ್ ಪುರಿ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದ್ದರು. ಇಂದು ಸಂಜೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ ಅವರ ಭೇಟಿಗೆ ಸಮಯ ನಿಗದಿಯಾಗಿದ್ದು, ಸಂಪುಟ ವಿಸ್ತರಣೆ ಬಗ್ಗೆ ಚರ್ಚೆ ನಡೆಯಲಿದೆ. ಸಂಪುಟಕ್ಕೆ ಯಾರನ್ನೆಲ್ಲಾ ಸೇರಿಸಬೇಕು ಎಂಬುದರ ಬಗ್ಗೆ ಇಂದು ಅಂತಿಮಗೊಳ್ಳಲಿದೆ.