ಮನಪರಿವರ್ತನೆ ಮಾಡಿಕೊಂಡು ಸತ್ಪ್ರಜೆಗಳಾಗಿ ಬದುಕಿ

ಹಾವೇರಿ: ಕೈದಿಗಳು ಶಿಕ್ಷೆ ಮುಗಿಸಿ ಹೊರಗೆ ಬಂದಾಗ ಮನಪರಿವರ್ತನೆ ಮಾಡಿಕೊಂಡು ಸಮಾಜದಲ್ಲಿ ಉತ್ತಮ ಪ್ರಜೆಗಳಾಗಿ ಬದುಕುಬೇಕು ಎಂದು ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ  ಎಸ್.ಎಚ್.ರೇಣುಕಾದೇವಿ ಹೇಳಿದರು.

  ಮಾನವ ಹಕ್ಕುಗಳ ದಿನಾಚರಣೆ ಅಂಗವಾಗಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ನ್ಯಾಯವಾದಿಗಳ ಸಂಘ ಹಾಗೂ ಜಿಲ್ಲಾ ಕಾರಾಗೃಹ ಇವರ ಸಂಯುಕ್ತಾಶ್ರಯದಲ್ಲಿ ಮಂಗಳವಾರ ಸಂಜೆ ಜಿಲ್ಲಾ ಕಾರಾಗೃಹದಲ್ಲಿ ಹಮ್ಮಿಕೊಂಡಿದ್ದ ವಿಚಾರಣಾಧೀನ ಕೈದಿಗಳಿಗೆ ವಿಚಾರಣಾ ಮನವಿ ಕುರಿತು ಕಾನೂನು ಅರಿವು ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. 

ಸ್ವಾತಂತ್ರ್ಯ ಎಲ್ಲ ಮಾನವರ ಹಕ್ಕಾಗಿದೆ. ವ್ಯಕ್ತಿ ಸ್ವಾತಂತ್ರ್ಯಕ್ಕೆ ಚ್ಯುತಿ ಬರಬಾರದು.  ದುರಾಸೆಯಿಂದ, ಸುಲಭ ಮಾರ್ಗಗಳನ್ನು ಹುಡುಕಿ ಸಣ್ಣ ಅಪರಾಧಗಳನ್ನು ಮಾಡಿ ಶಿಕ್ಷೆ ಅನುಭವಿಸುತ್ತಿದ್ದವರು ಮಾಡಿದ ತಪ್ಪಿಗೆ ಪಶ್ಚಾತ್ತಾಪ ಪಟ್ಟು ಮನಸ್ಸನ್ನು ಬದಲಾಯಿಸಿಕೊಂಡು ಮತ್ತೊಮ್ಮೆ ನಿಮ್ಮ ಜೀವನದಲ್ಲಿ ತಪ್ಪು ಆಗದಂತೆ ಎಚ್ಚರವಹಿಸಬೇಕು ಎಂದು ಸಲಹೆ ನೀಡಿದರು.

ಜೀವನದಲ್ಲಿ ನೈತಿಕ ಮೌಲ್ಯಗಳನ್ನು ಅಳವಡಿಸಿಕೊಳ್ಳಬೇಕು, ಶಿಕ್ಷಾ ಅವಧಿಯಲ್ಲಿರುವ ತಾವು ಸೆರೆವಾಸದ ವೇಳೆಯನ್ನು ಸದುಪಯೋಗ ಪಡಿಸಿಕೊಳ್ಳಬೇಕು.

  ಕಾರಾಗೃಹದಲ್ಲಿರುವ ಗ್ರಂಥಾಲಯದ ಪುಸ್ತಕಗಳನ್ನು ಓದಬೇಕು. ಗ್ರಂಥಾಲಯದ ಸದುಪಯೋಗಪಡಿಸಿಕೊಳ್ಳಬೇಕು.  ತಾವು ಪ್ರೀತಿ, ಸ್ನೇಹ ಭಾವನೆಯನ್ನು ಬೆಳಸಿಕೊಂಡು ಉತ್ತಮ ಜೀವನ ನಡೆಸಬೇಕು ಎಂದು ಅವರು ಹೇಳಿದರು. 

ಜಿಲ್ಲಾ ಕಾರಾಗೃಹದ ಅಧೀಕ್ಷಕರಾದ ಟಿ.ಬಿ.ಭಜಂತ್ರಿ  ಅವರು  ಅಧ್ಯಕ್ಷತೆ ವಹಿಸಿ ಮಾತನಾಡಿದರು. ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದಶರ್ಿಗಳಾದ ಕೆ. ಶ್ರೀವಿದ್ಯಾ  ಅವರು ಪ್ರಾಸ್ತಾವಿಕವಾಗಿ ಮಾತನಾಡಿದರು. ಜಿಲ್ಲಾ ನ್ಯಾಯವಾದಿಗಳ ಸಂಘದ ಕಾರ್ಯದಶರ್ಿ ಪಿ.ಎಂ.ಬೆನ್ನೂರು ಮಾತನಾಡಿದರು. ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಪೆನೆಲ್ ವಕೀಲರಾದ ದೇವರಾಜ್ ಎನ್.ನಾಯ್ಡು ಹಾಗೂ ಸಿ.ಜಿ. ನೆಗಳೂರು ಉಪನ್ಯಾಸ ನೀಡಿದರು. 

  ಕಾರ್ಯಕ್ರಮದಲ್ಲಿ ಜಿಲ್ಲಾ ನ್ಯಾಯವಾದಿಗಳ ಸಂಘದ ಅಧ್ಯಕ್ಷ ಕೆ.ಸಿ.ಪಾವಲಿ, ಸಂತೋಷ ಐಹೊಳೆ, ಕಾರಾಗೃಹದ ಸಿಬ್ಬಂದಿ ಹಾಗೂ ಮತ್ತಿತರರು ಉಪಸ್ಥಿತರಿದ್ದರು.