ಬೆಂಗಳೂರು, ಏ 27, ಕೊರೊನಾ ಸಾಂಕ್ರಾಮಿಕ ರಾಜ್ಯ ಗ್ರಾಮೀಣ ಪ್ರದೇಶಗಳಲ್ಲಿ ಹರಡದಂತೆ ತಡೆಗಟ್ಟಲು ಕರ್ನಾಟಕ ರಾಜ್ಯ ಸರ್ಕಾರ ಕೈಗೊಂಡಿರುವ ಕ್ರಮಗಳನ್ನು ಬ್ರಿಟನ್ ಕಾನೂನು ಸಚಿವ ರಾಬರ್ಟ್ ಬಕ್ ಲ್ಯಾಂಡ್ ಪ್ರಶಂಸೆ ವ್ಯಕ್ತಪಡಿಸಿದ್ದಾರೆ. ಭಾನುವಾರ ನಡೆದ ವಿಡಿಯೋ ಕಾನ್ಫರೆನ್ಸ್ ವೇಳೆ ರಾಜ್ಯದಲ್ಲಿ ಲಾಕ್ ಡೌನ್ ಜಾರಿಗೊಳಿಸಲು ತಮ್ಮ ಸರ್ಕಾರ ಕೈಗೊಂಡಿರುವ ವಿವಿಧ ಕ್ರಮಗಳನ್ನು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಬ್ರಿಟನ್ ಕಾನೂನು ಸಚಿವರಿಗೆ ವಿವರಿಸಿದ್ದರು ಎಂದು ಅಧಿಕೃತ ಮೂಲಗಳು ಸೋಮವಾರ ತಿಳಿಸಿವೆ.
ಪರಿಸ್ಥಿತಿಗೆ ಅನುಗುಣವಾಗಿ ಲಾಕ್ ಡೌನ್ ನಿರ್ಬಂಧಗಳನ್ನು ಕೆಲವು ಕಡೆ ನಿಧಾನವಾಗಿ ತೆರವುಗೊಳಿಸಲಾಗುತ್ತಿದೆ ಎಂದು ಮುಖ್ಯಮಂತ್ರಿಗಳು ವಿವರಿಸಿದರು. ಬ್ರಿಟನ್ ನಲ್ಲಿ ನೆಲೆಸಿರುವ ಕನ್ನಡಿಗ ಶರವಣ ಗುರುಮೂರ್ತಿ, ಬ್ಯಾಂಕ್ ಗಳಿಂದ ಭಾರಿ ಪ್ರಮಾಣದ ಸಾಲ ಪಡೆದು ಬ್ರಿಟನ್ ನಲ್ಲಿ ಉನ್ನತ ವ್ಯಾಸಂಗ ನಡೆಸುತ್ತಿರುವ ವಿದ್ಯಾರ್ಥಿಗಳ ನೆರವಿಗೆ ಧಾವಿಸಬೇಕು ಎಂದು ವಿಡಿಯೋ ಕಾನ್ಫರೆನ್ಸ್ ವೇಳೆ ಮುಖ್ಯಮಂತ್ರಿಗಳಿಗೆ ಮನವಿ ಮಾಡಿದರು. ಈ ಕುರಿತು ಪ್ರತಿಕ್ರಿಯಿಸಿದ ಮುಖ್ಯಮಂತ್ರಿ ಯಡಿಯೂರಪ್ಪ, ಬ್ಯಾಂಕುಗಳೊಂದಿಗೆ ಈ ಸಂಬಂಧ ಸಭೆ ನಡೆಸಿ ವಿದ್ಯಾರ್ಥಿಗಳು ಪಾವತಿಸಬೇಕಾಗಿರುವ ಇಎಂಐ ಮರು ನಿಗದಿ ಸಾಧ್ಯವೇ ಎಂಬ ಬಗ್ಗೆ ಚರ್ಚಿಸಿ ಪರಿಹಾರ ಕಲ್ಪಿಸಲು ಯತ್ನಿಸುವ ಭರವಸೆ ನೀಡಿದರು.