ಲೋಕದರ್ಶನ ವರದಿ
ವಿಜಯಪುರ 30: ಘನತ್ಯಾಜ್ಯ ಹಾಗೂ ಬಯೋಮೆಡಿಕಲ್ ತ್ಯಾಜ್ಯಗಳ ವ್ಯವಸ್ಥಿತ ನಿರ್ವಹಣೆ ಕುರಿತಂತೆ ವರದಿ ಸಲ್ಲಿಸುವಂತೆ ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿಂದು ಘನತ್ಯಾಜ್ಯ ನಿರ್ವಹಣೆಗೆ ಸಂಬಂಧಪಟ್ಟಂತೆ ನಡೆದ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು, ರಾಷ್ಟ್ರೀಯ ಹಸಿರು ನ್ಯಾಯ ಮಂಡಳಿಗೆ ಪ್ರತಿ 6 ತಿಂಗಳಿಗೊಮ್ಮೆ ಅಫಿಡವಿಟ್ ಸಲ್ಲಿಸಬೇಕಾಗಿರುವ ಹಿನ್ನಲೆಯಲ್ಲಿ ಜಿಲ್ಲೆಯಲ್ಲಿ ಘನತ್ಯಾಜ್ಯ ನಿರ್ವಹಣೆಗೆ ಸಂಬಂಧಪಟ್ಟಂತೆ ಕೈಗೊಳ್ಳಲಾಗುತ್ತಿರುವ ಕ್ರಮಗಳ ಕುರಿತು ಅಧಿಕೃತ ಮಾಹಿತಿಯೊಂದಿಗೆ ಸಲ್ಲಿಸುವಂತೆ ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಘನತ್ಯಾಜ್ಯ ನಿರ್ವಹಣೆ, ಬಯೋ ಮೆಡಿಕಲ್ ತ್ಯಾಜ್ಯ ನಿರ್ವಹಣೆ, ಪರಿಸರ ಮಾಲಿನ್ಯ ನಿಯಂತ್ರಣ, ನೀರು ಮಾಲಿನ್ಯ, ಅಪಾಯಕಾರಿ ತ್ಯಾಜ್ಯಗಳ ನಿರ್ವಹಣೆ, ಜಲಸಂಪನ್ಮೂಲ ಗುಣಮಟ್ಟ ಪರೀಕ್ಷೆ, ಬಯಲು ಮಲವಿಸರ್ಜನೆ ನಿಯಂತ್ರಣ, ನದಿಪಾತ್ರದ ವ್ಯಾಪ್ತಿಯಲ್ಲಿ ಬಯಲು ಮಲ ವಿಸರ್ಜನೆ ನಿಯಂತ್ರಣ, ವಾಹನಗಳಿಂದ ಉಂಟಾಗುವ ಪರಿಸರ ಮಾಲಿನ್ಯ ನಿಯಂತ್ರಣ, ಶಬ್ದ ಮಾಲಿನ್ಯ ನಿಯಂತ್ರಣ, ವಾಯು ಮಾಲಿನ್ಯ ನಿಯಂತ್ರಣ ಸೇರಿದಂತೆ ಇತರೆ ಘನತ್ಯಾಜ್ಯ ನಿರ್ವಹಣೆಗೆ ಸಂಬಂಧಪಟ್ಟಂತೆ ಸಮಗ್ರವಾದ ವರದಿಯನ್ನು ಸಿದ್ಧಪಡಿಸಿ ಸಲ್ಲಿಸುವಂತೆ ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಅದರಂತೆ ಕೈಗಾರಿಕಾ ತ್ಯಾಜ್ಯ ನಿರ್ವಹಣೆಗೆ ಸಂಬಂಧಪಟ್ಟ ಯೋಜನೆ, ಘನತ್ಯಾಜ್ಯಗಳ ಡಂಪಿಂಗ್ ಸೇರಿದಂತೆ ನಿರ್ವಹಣೆಗೆ ಮತ್ತು ಸಂಸ್ಕರಣೆಗೆ ಕೈಗೊಂಡ ಕ್ರಮಗಳ ಬಗ್ಗೆ ಮಾಹಿತಿ ನೀಡಬೇಕು. ಬಯೋಮೆಡಿಕಲ್ ಘನತ್ಯಾಜ್ಯ ನಿರ್ವಹಣೆಗೆ ಸಂಬಂಧಪಟ್ಟಂತೆ ಆರೋಗ್ಯ ಇಲಾಖೆ, ನಗರ ಸ್ಥಳೀಯ ಸಂಸ್ಥೆಗಳು ಸಮನ್ವಯತೆಯಿಂದ ಕಾರ್ಯನಿರ್ವಹಿಸಬೇಕು.
ಗಣಿ ಮತ್ತು ಭೂವಿಜ್ಞಾನ ಅಧಿಕಾರಿಗಳು ಖಾಸಗಿ ಬೊರವೆಲ್ ಕೊರೆಯಿಸಲು ಸಂಬಂಧಪಟ್ಟಂತೆ ಇರುವ ನಿಯಮಾವಳಿಗಳನ್ನು ಮಹಾನಗರ ಪಾಲಿಕೆಗೆ ಸಲ್ಲಿಸಬೇಕು. ಅಂತರಜಲ ಮಂಡಳಿ, ನಗರ ಸ್ಥಳೀಯ ಸಂಸ್ಥೆಗಳು, ಪಶು ಸಂಗೋಪನಾ ಇಲಾಖೆ, ಆರೋಗ್ಯ ಇಲಾಖೆ, ಪ್ರಾದೇಶಿಕ ಸಾರಿಗೆ ಇಲಾಖೆ, ನೀರಾವರಿ ಇಲಾಖೆ, ಮಾಲಿನ್ಯ ನಿಯಂತ್ರಣ ಮಂಡಳಿ ಸೇರಿದಂತೆ ವಿವಿದ ಇಲಾಖೆಗಳ ವ್ಯಾಪ್ತಿಯಲ್ಲಿ ಕೈಗೊಳ್ಳಲಾದ ಕ್ರಮಗಳ ಬಗ್ಗೆ ತಕ್ಷಣ ಮಾಹಿತಿ ಸಿದ್ಧಪಡಿಸಿ ಸಲ್ಲಿಸುವಂತೆ ಜಿಲ್ಲಾಧಿಕಾರಿಗಳು ತಿಳಿಸಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗೋವಿಂದ ರೆಡ್ಡಿ ಸೇರಿದಂತೆ ಮಹಾನಗರ ಪಾಲಿಕೆ ಆಯುಕ್ತರು, ನಗರ ಸ್ಥಳೀಯ ಸಂಸ್ಥೆಗಳ ಮುಖ್ಯಾಧಿಕಾರಿಗಳು, ಜಿಲ್ಲಾ ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಇತರರು ಉಪಸ್ಥಿತರಿದ್ದರು. ಮಾಲಿನ್ಯ ನಿಯಂತ್ರಣ ಮಂಡಳಿ ಸಹಾಯಕ ಅಭಿಯಂತರರಾದ ಆದಮ ಪಟೇಲ ಸ್ವಾಗತಿಸಿ, ಕೈಗೊಳ್ಳಬೇಕಾಧ ಕ್ರಮಗಳ ಬಗ್ಗೆ ಮಾಹಿತಿ ನೀಡಿದರು