ನೀತಿ ಸಂಹಿತೆ ಉಲ್ಲಂಘನೆ; ಶಾ ವಿರುದ್ಧ ಎಎಪಿ ದೂರು

ನವದೆಹಲಿ, ಜ 29 :     ಅವಹೇನಕಾರಿ ವಿಡಿಯೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಅಪ್ ಲೋಡ್ ಮಾಡಿರುವ ಆರೋಪಕ್ಕೆ ಸಂಬಂಧಿಸಿದಂತೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಇತರ ಬಿಜೆಪಿ ನಾಯಕರ ವಿರುದ್ದ  ಆಮ್ ಆದ್ಮಿ ಪಕ್ಷ (ಎಎಪಿ) ನಾಯಕರು ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿದ್ದಾರೆ. 

ಎಎಪಿ ಸರ್ಕಾರ ದೆಹಲಿಯ ಸರ್ಕಾರಿ ಶಾಲೆಗಳ ಗುಣಮಟ್ಟ ಸುಧಾರಿಸಲು ಏನೂ ಕ್ರಮ ಕೈಗೊಂಡಿಲ್ಲ ಎಂದು ಸಾರ್ವಜನಿಕ ಹೇಳಿಕೆಗಳನ್ನು ನೀಡುವ ಮೂಲಕ ಅಮಿತ್ ಶಾ ಮತ್ತು ಇತರ ಸಂಸದರು ನೀತಿ ಸಂಹಿತೆ ಉಲ್ಲಂಘಿಸಿದ್ದಾರೆ ಎಂದು ಆರೋಪಿಸಿ ಎಎಪಿ ನಾಯಕರಾದ ಸಂಜಯ್ ಸಿಂಗ್ ಮತ್ತು ಪಂಕಜ್ ಗುಪ್ತ ದೂರಿನಲ್ಲಿ ಆರೋಪಿಸಿದ್ದಾರೆ. 

ಅಮಿತ್ ಶಾ ಮತ್ತಿತರರು ಅತ್ಯಂತ ವ್ಯವಸ್ಥಿತವಾಗಿ ಅರವಿಂದ ಕೇಜ್ರೀವಾಲ್, ಮನೀಶ್ ಸಿಸೋಡಿಯಾ ಮತ್ತಿತರರ ವಿರುದ್ಧ ಅವಹೇಳನಕಾರಿ ಹೇಳಿಕೆಗಳನ್ನು ಒಳಗೊಂಡಿರುವ ವಿಡಿಯೋಗಳನ್ನು ಟ್ವಿಟರ್ ಮತ್ತು ಇತರ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ. ಇದನ್ನು ಪಕ್ಷದ ಸಂಸದರು ಸೇರಿದಂತೆ ಇತರರು ದೊಡ್ಡ ಪ್ರಮಾಣದಲ್ಲಿ ಹಂಚಿಕೊಂಡಿದ್ದಾರೆ ಎಂದು ಅವರು ದೂರಿದ್ದಾರೆ. 

ಈ ಸಂಬಂಧ ಅಮಿತ್ ಶಾ ಮತ್ತಿತರರ ವಿರುದ್ಧ ಎಫ್ ಐಆರ್ ದಾಖಲಿಸಬೇಕು, ಅವರನ್ನು ಪ್ರಚಾರದಿಂದ ದೂರವಿರುವಂತೆ ನಿರ್ಬಂಧ ಹೇರಬೇಕು ಮತ್ತು ವಿಡಿಯೋಗಳನ್ನು ತೆಗೆದುಹಾಕುವಂತೆ ನಿರ್ದೇಶನ ನೀಡಬೇಕು ಎಂದು ದೂರಿನಲ್ಲಿ ಮನವಿ ಮಾಡಿದ್ದಾರೆ.