ಜಿಲ್ಲೆಯಲ್ಲಿ ಬಾಲ ಕಾರ್ಮಿಕ ಪದ್ಧತಿ ಹಾಗೂ ಬಾಲ್ಯವಿವಾಹ ಪಿಡುಗು ನಿರ್ಮೂಲನೆಗೆ ಸಾರ್ವಜನಿಕರು ಕೈಜೋಡಿಸಿ: ಜಿಲ್ಲಾಧಿಕಾರಿ ಟಿ.ಭೂಬಾಲನ್
World Day Against Child Labor organized: Vijaypur news
ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನ ಆಯೋಜನೆ
ವಿಜಯಪುರ 12 : ಬಾಲ ಕಾರ್ಮಿಕ ಪದ್ಧತಿ ಹಾಗೂ ಬಾಲ್ಯ ವಿವಾಹದಂತಹ ಸಾಮಾಜಿಕ ಅನಿಷ್ಟ ಪಿಡುಗುಗಳ ಸಂಪೂರ್ಣ ನಿರ್ಮೂಲನೆಗೆ ಸಾರ್ವಜನಿಕರು, ಪೋಷಕರು ಹಾಗೂ ಈ ಕ್ಷೇತ್ರದಲ್ಲಿ ಕಾರ್ಯ ನಿರ್ವಹಿಸುತ್ತಿರುವ ವಿವಿಧ ಸಂಘ-ಸಂಸ್ಥೆಗಳು ಕೈಜೋಡಿಸಿ, ಈ ನಿಟ್ಟಿನಲ್ಲಿ ಎಲ್ಲರೂ ಸಮನ್ವಯತೆಯಿಂದ ಕಾರ್ಯ ನಿರ್ವಹಿಸಿ ಸೂಕ್ತ ಜನಜಾಗೃತಿ ಮೂಡಿಸಬೇಕು ಎಂದು ಜಿಲ್ಲಾಧಿಕಾರಿ ಟಿ.ಭೂಬಾಲನ್ ಹೇಳಿದರು.
ನಗರದ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದಲ್ಲಿ ಗುರುವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಪೊಲೀಸ್ ಇಲಾಖೆ, ಕಾರ್ಮಿಕ ಇಲಾಖೆ, ಶಿಕ್ಷಣ ಇಲಾಖೆ ಮತ್ತು ಜಿಲ್ಲಾ ಬಾಲಕಾರ್ಮಿಕ ಯೋಜನಾ ಸಂಘ ಇವರ ಸಂಯುಕ್ತಾಶ್ರಯದಲ್ಲಿ ಆಯೋಜಿಸಲಾಗಿದ್ದ ವಿಶ್ವ ಬಾಲಕಾರ್ಮಿಕ ಪದ್ದತಿ ವಿರೋಧಿ ದಿನಾಚರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು. ಉತ್ತಮ ಗುಣಮಟ್ಟದ ಆರೋಗ್ಯ, ಶಿಕ್ಷಣ ಮಕ್ಕಳ ಮೂಲಭೂತ ಹಕ್ಕಾಗಿದ್ದು, ಇದನ್ನು ಉತ್ತಮಪಡಿಸುವುದರಿಂದ ಸುಭದ್ರ ಸಮಾಜದ ನಿರ್ಮಾಣಕ್ಕೆ ಅಡಿಪಾಯವಾಗುವುದು. ಬಾಲ ಕಾರ್ಮಿಕ ಹಾಗೂ ಬಾಲ್ಯ ವಿವಾಹ ಅನಿಷ್ಟ ಪದ್ಥತಿ ಮುಕ್ತ ಜಿಲ್ಲೆಯನ್ನಾಗಿಸಲು ಹಾಗೂ ಈ ಪಿಡಗುಗಳ ನಿರ್ಮೂಲನೆಗೊಳಿಸಲು ಕಟಿಬದ್ಧರಾಗಿ ಕಾರ್ಯನಿರ್ವಹಿಸಬೇಕು ಎಂದು ಹೇಳಿದರು.
ಬಾಲಕಾರ್ಮಿಕ ಪದ್ದತಿಯ ನಿರ್ಮೂಲನೆಗೆ ಸಂಬಂಧಿಸಿದ ಎಲ್ಲಾ ಇಲಾಖೆಗಳು ಶ್ರಮಿಸುತ್ತಿವೆ. ಈ ನಿಟ್ಟಿನಲ್ಲಿ ಸಾರ್ವಜನಿಕರ ಸಹಕಾರವೂ ಅಗತ್ಯವಾಗಿದೆ. ಮಕ್ಕಳ ಸಹಾಯವಾಣಿ-1098 ಕರೆ ಮಾಡಿ ಮಾಹಿತಿ ನೀಡಿದಲ್ಲಿ ಮಕ್ಕಳ ರಕ್ಷಣೆಯ ಕಾರ್ಯ ಮಾಡಲಾಗುವುದೆಂದು ಅವರು ತಿಳಿಸಿದರು. ಈ ದಿನ ದೇಶಾದ್ಯಂತ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನವನ್ನಾಗಿ ಆಚರಿಸಿ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ. ಮಕ್ಕಳಿಗೆ ಉಚಿತ ಮತ್ತು ಕಡ್ಡಾಯ ಶಿಕ್ಷಣವೂ ಸೇರಿದಂತೆ ಮಕ್ಕಳ ರಕ್ಷಣೆಯ ಹಿತ ಕಾಯುವಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಅನೇಕ ಯೋಜನೆಗಳನ್ನು ಜಾರಿಗೊಳಿಸಿ ಅನುಷ್ಟಾನಗೊಳಿಸಲಾಗುತ್ತಿದೆ. ಯೋಜನೆಗಳ ಸದುಪಯೋಗಪಡೆದುಕೊಂಡು ತಮ್ಮ ಮಕ್ಕಳನ್ನು ವಿದ್ಯಾವಂತರನ್ನಾಗಿ ಮಾಡುವ ಮೂಲಕ ಅವರ ಜೀವನ ಹಾಗೂ ಭವಿಷ್ಯ ಸುಂದರಗೊಳಿಸುವ ಮಹತ್ತರ ಹೊಣೆ ಪಾಲಕರ ಮೇಲಿದೆ ಎಂದು ಹೇಳಿದರು.
ಐತಿಹಾಸಿಕ ಹಿನ್ನೆಲೆ ಇರುವ ನಮ್ಮ ಹೆಮ್ಮೆಯ ಜಿಲ್ಲೆಯಲ್ಲಿ ಸಂಪೂರ್ಣ ಬಾಲ ಕಾರ್ಮಿಕ ಮುಕ್ತ ಜಿಲ್ಲೆಯನ್ನಾಗಿಸುವ ನಿಟ್ಟಿನಲ್ಲಿ ನಮ್ಮೆಲ್ಲರ ಜವಾಬ್ದಾರಿ ಇನ್ನೂ ಹೆಚ್ಚಾಗಿದೆ. ಎಲ್ಲ ಮಕ್ಕಳನ್ನು ಶಾಲಾ ದಾಖಲಾತಿ ಮಾಡಿಸುವ ಮೂಲಕ ಶಾಲೆಯಿಂದ ಹೊರಗುಳಿಯುವ ಮಕ್ಕಳ ಶೂನ್ಯಕ್ಕೆ ತರುವ ನಿಟ್ಟಿನಲ್ಲಿ ಯಾವುದೇ ಮಗು ಶಾಲೆಯಿಂದ ಹೊರಗುಳಿಯದಂತೆ ಸಂಬಂಧಿಸಿದ ಇಲಾಖೆಗಳು ನಿಗಾವಹಿಸಬೇಕು. ಶಾಲೆಬಿಟ್ಟ ಮಕ್ಕಳ ಸಮಗ್ರ ಮಾಹಿತಿ ಕ್ರೋಢಿಕರಿಸಬೇಕು. ಬಾಲ ಕಾರ್ಮಿಕರು ಕಂಡು ಬಂದಲ್ಲಿ ಸಂಬಂಧಿಸಿದ ಇಲಾಖೆಗಳಿಗೆ ಸಾರ್ವಜನಿಕರು ಮಾಹಿತಿ ನೀಡಬೇಕು. ಯಾವುದೇ ಸಂದರ್ಭದಲ್ಲಿ ವಿದ್ಯಾರ್ಥಿಗಳು ಶಿಕ್ಷಣವನ್ನು ಮೊಟಕುಗೊಳಿಸಿದೇ, ವಿದ್ಯಾಭ್ಯಾಸವನ್ನು ಮುಂದುವರೆಸುವ ಮೂಲಕ ಉನ್ನತ ಶಿಕ್ಷಣ ಪಡೆದುಕೊಂಡು ಬದುಕನ್ನು ಸುಂದರಗೊಳಿಸಿಕೊಂಡು, ಸಮಾಜಕ್ಕೆ ಹಾಗೂ ದೇಶಕ್ಕೆ ತಮ್ಮ ಕೊಡುಗೆ ನೀಡಬೇಕು. ಬಾಲ ಕಾರ್ಮಿಕ ಪದ್ಧತಿಯಿಂದ ಮಕ್ಕಳ ಭವಿಷ್ಯದ ಮೇಲೆ ಉಂಟಾಗುವ ದುಷ್ಪರಿಣಾಮಗಳ ಕುರಿತು ಶಾಲಾ-ಕಾಲೇಜಿನ ವಿದ್ಯಾರ್ಥಿಗಳು ತಮ್ಮ ನೆರೆಹೊರೆಯವರಿಗೂ ತಿಳುವಳಿಕೆ ನೀಡಬೇಕು. ಬಾಲ ಕಾರ್ಮಿಕ ಮಕ್ಕಳು ಕಂಡು ಬಂದಲ್ಲಿ ಮಾಹಿತಿ ನೀಡಿ, ಅವರ ರಕ್ಷಣೆ ಮಾಡಿ, ಅವರನ್ನು ಸಮಾಜದ ಮುಖ್ಯವಾಹಿನಿಗೆ ತಂದು ಅವರು ಶಿಕ್ಷನ ಪಡೆದುಕೊಂಡು ಉತ್ತಮ ಜೀವನ ನಿರ್ವಹಿಸುವಂತಾಗಲು ಎಲ್ಲರ ಸಹಕಾರ ಅಗತ್ಯವಾಗಿದೆ ಎಂದು ಹೇಳಿದರು.
ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಅರವಿಂದ ಹಾಗರಗಿ ಅವರು ಮಾತನಾಡಿ, 1986ರಲ್ಲಿ ಬಾಲ ಕಾರ್ಮಿಕ ನಿಷೇಧ ಹಾಗೂ 2016ರಲ್ಲಿ ಬಾಲ ಕಾರ್ಮಿಕ ಹಾಗೂ ಕಿಶೋರ ನಿಷೇಧ ಕಾಯ್ದೆಯೂ ಜಾರಿಗೆ ಬಂದಿದೆ. ಬಾಲ ಕಾರ್ಮಿಕ ಪದ್ಧತಿ ಹೋಗಲಾಡಿಸಲು ಎಲ್ಲರ ಸಹಕಾರ ಅಗತ್ಯವಾಗಿದೆ. ಬಾಲ ಕಾರ್ಮಿಕರು ಕಂಡು ಬಂದಲ್ಲಿ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರಕ್ಕಾಗಲಿ, ಸಂಬಂಧಿಸಿದ ಇಲಾಖೆಗಳಿಗೆ ಸಾರ್ವಜನಿಕರು ಮಾಹಿತಿ ನೀಡಬೇಕು ಎಂದು ಹೇಳಿದರು.
ಹೆಚ್ಚುವರಿ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿಗಳಾದ ಶಂಕರ ಮಾರಿಹಾಳ ಅವರು ಮಾತನಾಡಿ, ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ಪ್ರತಿಯೊಬ್ಬರಿಗೂ ಶಿಕ್ಷಣ ಅವಶ್ಯಕವಾಗಿದೆ. ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಒದಗಿಸಬೇಕು. ಯಾವುದೇ ಮಕ್ಕಳು ಶಿಕ್ಷಣದಿಂದ ವಂಚಿತರಾಗದಂತೆ ನೋಡಿಕೊಳ್ಳುವ ಬಹು ದೊಡ್ಡ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ ಎಂದು ಹೇಳಿದರು.
ಜಿಲ್ಲಾ ಕಾರ್ಮಿಕ ಇಲಾಖೆಯ ಅಧಿಕಾರಿಗಳಾದ ಉಮಾಶ್ರೀ ಎಸ್.ಕೋಳಿ ಪ್ರಾಸ್ತಾವಿಕವಾಗಿ ಮಾತನಾಡಿ, ಮಕ್ಕಳ ಮನಸ್ಸು ಬಹಳ ಸೂಕ್ಷ್ಮವಾದದ್ದು, ಅವರ ಬಾಲ್ಯವನ್ನು ಉತ್ತಮವಾಗಿಸುವುದು ನಮ್ಮೆಲ್ಲರ ಕರ್ತವ್ಯವಾಗಿದೆ. ಬಾಲಕಾರ್ಮಿಕ ಮಕ್ಕಳನ್ನು ತೊಡಗಿಸಿಕೊಂಡಿರುವ ಮಾಲೀಕರ ವಿರುದ್ಧ ಈಗಾಗಲೇ ಬಹಳಷ್ಟು ಕ್ರಮಗಳನ್ನು ತೆಗೆದುಕೊಳ್ಳಲಾಗತ್ತಿದೆ. ಈ ನಿಟ್ಟಿನಲ್ಲಿ ಸರ್ಕಾರ 11 ಇಲಾಖೆಗಳ ಅಧಿಕಾರಿಗಳನ್ನು ನೀರೀಕ್ಷಕರನ್ನಾಗಿ ನೇಮಕ ಮಾಡಿದ್ದು, ಈ ಅಧಿಕಾರಿಗಳ ತಂಡ ಯೋಜಿತವಾಗಿ ಹಾಗೂ ಅನೀರೀಕ್ಷಿತವಾಗಿ ದಾಳಿ ಮಾಡುವ ಮೂಲಕ ಮಕ್ಕಳನ್ನು ರಕ್ಷಣೆ ಮಾಡಿ, ಮಕ್ಕಳ ಕಲ್ಯಾಣ ಸಮಿತಿಗೆ ಒಪ್ಪಿಸುತ್ತದೆ. ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಜಿಲ್ಲಾ ಬಾಲ ಕಾರ್ಮಿಕ ಯೋಜನಾ ಸೋಸಾಯಿಟಿ ವತಿಯಿಂದ ಸಾಕಷ್ಟು ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ. ಜಿಲ್ಲಾಧಿಕಾರಿಗಳ ಮಾರ್ಗದರ್ಶನದ ಮೇರೆಗೆ, ಜಿಲ್ಲೆಯಲ್ಲಿ ಪ್ರಸಕ್ತ ಸಾಲಿನಲ್ಲಿ 26 ಪ್ರಕರಣಗಳನ್ನು ದಾಖಲಿಸಲಾಗಿದೆ. ಮಾಲೀಕರಿಗೆ ಜಾಗೃತಿ ಸಹ ಮೂಡಿಸಲಾಗುತ್ತಿದೆ. ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಸಾರ್ವಜನಿಕರ ಹಾಗೂ ಎಲ್ಲ ಇಲಾಖೆಗಳ ಸಹಕಾರ ಅಗತ್ಯವಾಗಿದೆ ಎಂದು ಹೇಳಿದರು.
ಅನೌಪಚಾರಿಕ ಶಿಕ್ಷಣ ಸಂಸ್ಥೆಯ ಫಾದರ್ ಕೆವಿನ್ ಸೆಕ್ವೆರಾ ಅವರು, ಸಮಗ್ರ ಮಕ್ಕಳ ರಕ್ಷಣೆ ನಮ್ಮೆಲ್ಲರ ಜವಾಬ್ದಾರಿ ಹಾಗೂ ಕರ್ತವ್ಯವೂ ಆಗಿದೆ. ಬಾಲಕಾರ್ಮಿಕ ಪದ್ದತಿಯ ಪಿಡುಗು ಮಕ್ಕಳ ತಮ್ಮ ಸಾಮಾಜಿಕ ಆರ್ಥಿಕ ಸ್ಥಿತಿಯನ್ನು ಕಸಿದುಕೊಳ್ಳುತ್ತಿದ್ದು, ಬಾಲಕಾರ್ಮಿಕ ಪದ್ದತಿಯ ನಿರ್ಮೂಲನೆಗೆ ಈ ಕ್ಷೇತ್ರದಲ್ಲಿ ಕಾರ್ಯ ನಿರ್ವಹಿಸುತ್ತಿರುವ ವಿವಿಧ ಸಂಘ-ಸಂಸ್ಥೆಗಳು, ಸಾರ್ವಜನಿಕರ ಸಹಕಾರದ ಅಗತ್ಯತೆಯ ಕುರಿತು ಹೇಳಿದರು.
ಈ ಕಾರ್ಯಕ್ರಮದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಉಪ ನಿರ್ದೇಶಕರಾದ ಕೆ. ಕೆ ಚವ್ಹಾಣ, ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಾದ ಟಿ.ಎಸ್.ಕೋಲಾರ, ಜಿಲ್ಲಾ ಶಸ್ತ್ರ ಚಿಕಿತ್ಸಕ ಶಿವಾನಂದ ಮಾಸ್ತಿಹೊಳಿ, ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಅಧಿಕಾರಿ ದೀಪಾಕ್ಷಿ ಜಾನಕಿ, ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷರಾದ ಬಸಮ್ಮ ಹತ್ತರಕಿ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಪ್ರಮಾಣ ವಚನ ಬೋಧಿಸಿದರು.
ವಿಶ್ವ ಬಾಲಕಾರ್ಮಿಕ ಪದ್ದತಿ ವಿರೋಧಿ ದಿನದ ಅಂಗವಾಗಿ ಜಾಗೃತಿ ಜಾಥಾಗೆ ಚಾಲನೆ : ನಗರದ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಜಾಥಾಕ್ಕೆ ಹಸಿರು ನಿಶಾನೆ ತೋರುವ ಮೂಲಕ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಗೌರವಾನ್ವಿತ ಹರೀಶ ಎ. ಅವರು ಚಾಲನೆ ನೀಡಿದರು. ಜಾಥಾವು ಗಾಂಧಿ ಚೌಕ್‌ದಿಂದ ವಿವಿಧ ಮಾರ್ಗಗಳಲ್ಲಿ ಸಂಚರಿಸಿ, ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದಲ್ಲಿ ಸಮಾವೇಶಗೊಂಡಿತು. ವಿವಿಧ ಘೋಷ ವಾಕ್ಯ ಹೇಳಲಾಯಿತು.
ಈ ಸಂದರ್ಭದಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಅರವಿಂದ ಹಾಗರಗಿ, ಅಪರ ಜಿಲ್ಲಾಧಿಕಾರಿಗಳು ಸೋಮಲಿಂಗ ಗೆಣ್ಣೂರ, ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಾದ ಸಿ.ಕೆ ಹೊಸಮನಿ, ಶಾಲೆಯ ಪ್ರಾಂಶುಪಾಲರು, ವಿವಿಧ ಶಾಲೆಗಳ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 