ಮಹಾಲಿಂಗಪುರದಲ್ಲಿ ವಿಶ್ವ ಯೋಗ ದಿನಾಚರಣೆ: ಸಾಧಕರಿಗೆ ಸನ್ಮಾನ

ಮಹಾಲಿಂಗಪುರದಲ್ಲಿ ವಿಶ್ವ ಯೋಗ ದಿನಾಚರಣೆ: ಸಾಧಕರಿಗೆ ಸನ್ಮಾನ World Yoga Day celebrated in Mahalingapur: Practicing yoga practitioners honored

ಲೋಕದರ್ಶನ ವರದಿ 

ಮಹಾಲಿಂಗಪುರ  21: ದೈಹಿಕ ಮತ್ತು ಮಾನಸಿಕ ಆರೋಗ್ಯದ ಮಹತ್ವವನ್ನು ಜನಸಾಮಾನ್ಯರಿಗೆ ಮನವರಿಕೆ ಮಾಡಿಕೊಡುವ ಉದ್ದೇಶದಿಂದ ಮಹಾಲಿಂಗಪುರ ನಗರದ ಎಪಿಎಂಸಿ ಗಣಪತಿ ದೇವಸ್ಥಾನದ ಆವರಣದಲ್ಲಿ ಎಸ್‌.ಎಸ್‌.ವಾಯ್ ಯೋಗ ಟೀಮ್ ವತಿಯಿಂದ 12ನೇ ವಿಶ್ವ ಯೋಗ ದಿನಾಚರಣೆಯನ್ನು ಅತ್ಯಂತ ವೈಭವ, ಸಂಭ್ರಮ ಹಾಗೂ ಅರ್ಥಪೂರ್ಣವಾಗಿ ಆಚರಿಸಲಾಯಿತು. ಯೋಗಾಭ್ಯಾಸದ ಮಹತ್ವವನ್ನು ಸಾರುವ ಈ ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಗಣ್ಯರನ್ನು ಸನ್ಮಾನಿಸಿ ಗೌರವಿಸಲಾಯಿತು. 

ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಯುವ ಯೋಗ ಶಿಕ್ಷಕ ರಾಘವೇಂದ್ರ ನಿಲ್ಲಣ್ಣವರ ಅವರು, ಯೋಗವು ಕೇವಲ ದೈಹಿಕ ವ್ಯಾಯಾಮವಲ್ಲ, ಅದು ದೇಹ, ಮನಸ್ಸು ಮತ್ತು ಆತ್ಮವನ್ನು ಒಂದಾಗಿಸುವ ಸಮಗ್ರ ಆರೋಗ್ಯ ಪದ್ಧತಿಯಾಗಿದೆ ಎಂದು ತಿಳಿಸಿದರು. ಇಂದಿನ ಒತ್ತಡದ ಬದುಕಿನಲ್ಲಿ ಯೋಗದ ಅಗತ್ಯತೆ ಹೆಚ್ಚಾಗಿದ್ದು, ನಿಯಮಿತ ಯೋಗಾಭ್ಯಾಸದಿಂದ ಮಧುಮೇಹ, ರಕ್ತದೊತ್ತಡ, ಹೃದಯ ಸಂಬಂಧಿ ಕಾಯಿಲೆಗಳು ಸೇರಿದಂತೆ ಅನೇಕ ದೀರ್ಘಕಾಲಿಕ ರೋಗಗಳನ್ನು ನಿಯಂತ್ರಣದಲ್ಲಿಡಬಹುದು ಎಂದು ವೈಜ್ಞಾನಿಕ ದೃಷ್ಟಿಕೋನದಿಂದ ವಿವರಿಸಿದರು. 

ಕಾರ್ಯಕ್ರಮದಲ್ಲಿ ಸಮಾಜ ಸೇವಕ ಚನ್ನಬಸು ಹುರಕಡ್ಲಿ ಅವರು ಮಾತನಾಡಿ, ಆರೋಗ್ಯಕರ ಸಮಾಜ ನಿರ್ಮಾಣಕ್ಕೆ ಯೋಗದ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ಪ್ರತಿಯೊಬ್ಬರೂ ದಿನನಿತ್ಯದ ಜೀವನದಲ್ಲಿ ಯೋಗವನ್ನು ಅಳವಡಿಸಿಕೊಂಡು ಆರೋಗ್ಯ ಕಾಪಾಡಿಕೊಳ್ಳಬೇಕು ಎಂದು ಕರೆ ನೀಡಿದರು. ಯುವ ಮುಖಂಡ ಹನಮಂತ ಕೊಣ್ಣೂರ ಅವರು ಮಾತನಾಡಿ, “ಆರೋಗ್ಯವೇ ನಿಜವಾದ ಸಂಪತ್ತು. ಯೋಗವು ದೈಹಿಕ ಆರೋಗ್ಯದ ಜೊತೆಗೆ ಮಾನಸಿಕ ನೆಮ್ಮದಿ ಮತ್ತು ಆತ್ಮವಿಶ್ವಾಸವನ್ನು ಹೆಚ್ಚಿಸುತ್ತದೆ. ಆದ್ದರಿಂದ ಪ್ರತಿಯೊಬ್ಬರೂ ಯೋಗವನ್ನು ತಮ್ಮ ಜೀವನದ ಅವಿಭಾಜ್ಯ ಅಂಗವನ್ನಾಗಿ ಮಾಡಿಕೊಳ್ಳಬೇಕು” ಎಂದು ತಿಳಿಸಿದರು.