ನವದೆಹಲಿ, ಆ 16 ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನವದೆಹಲಿಯಲ್ಲಿಂದು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.
ಸುಮಾರು 40 ನಿಮಿಷಗಳ ಕಾಲ ಪ್ರಧಾನಿಯೊಂದಿಗೆ ಮುಖ್ಯಮಂತ್ರಿ ರಾಜ್ಯದ ಪ್ರವಾಹ ಪರಿಸ್ಥಿತಿಯ ಬಗ್ಗೆ ಚಚರ್ೆ ನಡೆಸಿದ್ದಾರೆ. ಹಿರಿಯ ನಾಯಕ ಆರ್. ಅಶೋಕ್ ಕೂಡ ಈ ವೇಳೆ ಉಪಸ್ಥಿತರಿದ್ದರು.
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಯಡಿಯೂರಪ್ಪ, ರಾಜ್ಯದಲ್ಲಿ ತೀವ್ರ ಪ್ರವಾಹದಿಂದ ಉಂಟಾಗಿರುವ ಹಾನಿಯ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮನವರಿಕೆ ಮಾಡಿಕೊಟ್ಟಿದ್ದೇವೆ. ಸಂತ್ರಸ್ತರಿಗೆ ನೆರವು ನೀಡುವಂತೆ ಮನವಿ ಮಾಡಲಾಗಿದೆ ಎಂದರು.
ನೆರೆಹಾವಳಿಯಿಂದ ಉಂಟಾದ ಸಂತ್ರಸ್ತರು ಸಂಕಷ್ಟ ಅನುಭವಿಸುತ್ತಿದ್ದು, ಇದರ ಸಂಪೂರ್ಣ ಮಾಹಿತಿಯನ್ನು ಪ್ರಧಾನಿಗೆ ನೀಡಲಾಗಿದೆ. ಮುಖ್ಯ ಕಾರ್ಯದರ್ಶಿ ಕೂಡ ಈ ಸಂದರ್ಭದಲ್ಲಿ ಇದ್ದು, ಮಾಹಿತಿ ನೀಡಿದ್ದಾರೆ. ಕೇಂದ್ರ ಸಚಿವರಾದ ನಿರ್ಮಲಾ ಸೀತಾರಾಮನ್, ಅಮಿತ್ ಶಾ ಕೂಡ ರಾಜ್ಯಕ್ಕೆ ಭೇಟಿ ನೀಡಿ ಪರಿಶೀಲಿಸಿ, ಕೇಂದ್ರಕ್ಕೆ ಮಾಹಿತಿ ನೀಡಿದ್ದಾರೆ. ಕೇಂದ್ರದಿಂದ ಮತ್ತೊಂದು ಅಧ್ಯಯನ ತಂಡ ರಾಜ್ಯಕ್ಕೆ ಶೀಘ್ರ ಆಗಮಿಸಲಿದೆ. ತಕ್ಷಣ ತಾತ್ಕಾಲಿಕ ಪರಿಹಾರ ನೀಡುವಂತೆ ಮನವಿ ಮಾಡಿದ್ದೇವೆ. ಈ ಬಗ್ಗೆ ಚರ್ಚೆ ಮಾಡಿ ಹೇಳುತ್ತೇನೆ ಎಂದು ಮೋದಿ ಭರವಸೆ ನೀಡಿದ್ದಾರೆ. ನೋಡೋಣ, ಅವರು ಹಣ ಬಿಡುಗಡೆ ಮಾಡುವ ವಿಶ್ವಾಸವಿದೆ ಎಂದು ಹೇಳಿದರು.
ರಾಜ್ಯದಲ್ಲಿ 108 ವರ್ಷಗಳಲ್ಲೇ ಅತಿ ಹೆಚ್ಚಿನ ಅತಿವೃಷ್ಟಿ ಉಂಟಾಗಿದೆ. 15 ದಿನಗಳ ಹಿಂದೆ ಬರದ ಪರಿಸ್ಥಿತಿಯಿದ್ದ ರಾಜ್ಯದಲ್ಲಿ ಈಗ ಎಲ್ಲಾ ಜಲಾಶಯಗಳು ಭರ್ತಿಯಾಗಿವೆ. ಮಹಾರಾಷ್ಟ್ರದಿಂದ ಹೆಚ್ಚುವರಿ ನೀರನ್ನು ಬಿಟ್ಟಿರುವುದರಿಂದ ಆಗಿರುವ ಹಾನಿ ಮುಂತಾದ ವಿಷಯಗಳನ್ನು ಪ್ರಧಾನಿಗೆ ಮನವರಿಕೆ ಮಾಡಲಾಗಿದೆ. ರಾಜ್ಯದಲ್ಲಿ ಸುಮಾರು 40 ಸಾವಿರ ಕೋಟಿ ರೂ.ಗೂ ಅಧಿಕ ಹಾನಿ ಉಂಟಾಗಿರಬಹುದು ಎಂದು ಅಂದಾಜಿಸಲಾಗಿದೆ. ರಸ್ತೆ, ಮನೆ, ಸೇತುವೆ ಸೇರಿದಂತೆ ಮೂಲಭೂತ ಅವಶ್ಯಕತೆಗಳನ್ನು ಮತ್ತೆ ನಿರ್ಮಿಸಬೇಕಾಗಿದೆ ಎಂದರು
ರಾಜ್ಯ ಸರ್ಕಾರ ಕೈಗೊಂಡಿರುವ ಪರಿಹಾರ ಕಾರ್ಯಗಳ ಬಗ್ಗೆಯೂ ಮೋದಿ ಅವರಿಗೆ ಮಾಹಿತಿ ನೀಡಲಾಗಿದೆ. ಅವರು ಖಂಡಿತವಾಗಿಯೂ ಪರಿಹಾರ ಬಿಡುಗಡೆ ಮಾಡುವ ವಿಶ್ವಾಸವಿದೆ ಎಂದು ಹೇಳಿದರು.
ಆರ್. ಅಶೋಕ್ ಮಾತನಾಡಿ, ಸುಮಾರು 40 ನಿಮಿಷಗಳ ಕಾಲ ಪ್ರಧಾನಿಯೊಂದಿಗೆ ಚರ್ಚಿ ಸಲಾಗಿದೆ. ಇಡೀ ರಾಜ್ಯದ ಚಿತ್ರಣವನ್ನು ಕೊಟ್ಟಿದ್ದೇವೆ. ಪ್ರವಾಹದಿಂದ ಉಂಟಾದ ಸಾವು-ನೋವು, ಹಾನಿ, ಭೂಕುಸಿತ, ರಾಜ್ಯ ಸರ್ಕಾರ ಕೈಗೊಂಡ ಕ್ರಮಗಳು ಸೇರಿದಂತೆ ಸಂಪೂರ್ಣ ವಿವರಗಳನ್ನು ನೀಡಿದ್ದೇವೆ. ಪ್ರಾರಂಭಿಕವಾಗಿ 10 ಸಾವಿರ ಕೋಟಿ ರೂ.ಬಿಡುಗಡೆ ಮಾಡುವಂತೆ ಮನವಿ ಮಾಡಲಾಗಿದೆ. ಖಂಡಿತವಾಗಿಯೂ ಅವರು ಹಣ ಬಿಡುಗಡೆ ಮಾಡುವ ವಿಶ್ವಾಸವಿದೆ ಎಂದು ಹೇಳಿದರು.