ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಸಂಜೆ ಪ್ರಮಾಣ ವಚನ ಸ್ವೀಕರಿಸುವೆ : ಯಡಿಯೂರಪ್ಪ

ಬೆಂಗಳೂರು, ಜುಲೈ 26  ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಇಂದು ಸಂಜೆ ರಾಜಭವನದಲ್ಲಿ ಪ್ರಮಾಣವಚನ ಸ್ವೀಕರಿಸುವುದಾಗಿ ಪಕ್ಷದ ರಾಜ್ಯಾಧ್ಯಕ್ಷರೂ ಆಗಿರುವ ಬಿಜೆಪಿ ಶಾಸಕಾಂಗ ನಾಯಕ ಬಿ ಎಸ್ ಯಡಿಯೂರಪ್ಪ ಶುಕ್ರವಾರ ಘೋಷಿಸಿದ್ದಾರೆ.   

ರಾಜಭವನದಲ್ಲಿ ರಾಜ್ಯಪಾಲ ವಜೂಭಾಯಿ ವಾಲಾ ಅವರನ್ನು ಭೇಟಿ ಮಾಡಿದ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಇಂದು ಸಂಜೆ 6 ರಿಂದ 6.15 ರ ವೇಳೆಗೆ ತಾವು ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸುವುದಾಗಿ ಹೇಳಿದರು. 

ಸರ್ಕಾರ ರಚನೆ ಸಂಬಂಧ ಬಿಜೆಪಿ ಶಾಸಕಾಂಗ ಪಕ್ಷದ ನಾಯಕನಾಗಿ ತಾವು ಮಂಡಿಸಿದ ಮನವಿಯನ್ನು ಸಮ್ಮತಿಸಿರುವ ರಾಜ್ಯಪಾಲರು ಸಕರ್ಾರ ರಚಿಸಲು ಸೂಚನೆ ನೀಡಿದ್ದಾರೆ ಎಂದರು.    

ಪ್ರಮಾಣವಚನ ಸ್ವೀಕಾರ ಸಮಾರಂಭಕ್ಕೆ ಹಂಗಾಮಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ, ಕಾಂಗ್ರೆಸ್ ಶಾಸಕಾಂಗ ನಾಯಕ ಸಿದ್ದರಾಮಯ್ಯ, ಸೇರಿದಂತೆ ಎಲ್ಲ ಶಾಸಕರು, ವಿಧಾನಪರಿಷತ್ ಸದಸ್ಯರಿಗೆ ಆಹ್ವಾನ ನೀಡುವುದಾಗಿ ಯಡಿಯೂರಪ್ಪ ತಿಳಿಸಿದರು. 

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರೊಂದಿಗೆ ಚರ್ಚಿಸಿದ ನಂತರ ತಾವು ರಾಜ್ಯಪಾಲರನ್ನು ಭೇಟಿ ಮಾಡಿದ್ದಾಗಿ ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ.  

ರಾಜ್ಯ ಸಚಿವ ಸಂಪುಟದಲ್ಲಿ ಯಾರು ಯಾರು ಇರಲಿದ್ದಾರೆ ಎಂಬುದನ್ನು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರೊಂದಿಗೆ ಚರ್ಚಿಸಿದ ನಂತರ ಆಖೈರುಗೊಳಿಸುವುದಾಗಿ ನಿಯೋಜಿತ ಮುಖ್ಯಮಂತ್ರಿ ಯಡಿಯೂರಪ್ಪ ತಿಳಿಸಿದರು.