ಲಕ್ನೋ, ಏ.20,ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ತಂದೆ ಆನಂದ್ ಸಿಂಗ್ ಬಿಶ್ತ್ ಸೋಮವಾರ ಬೆಳಗ್ಗೆ ದೆಹಲಿಯಲ್ಲಿ ನಿಧನರಾಗಿದ್ದಾರೆ. ಅವರಿಗೆ 89 ವರ್ಷ ವಯಸ್ಸಾಗಿತ್ತು. ಬೆಳಗ್ಗೆ 10.44ರ ಸುಮಾರಿಗೆ ಆನಂದ್ ಸಿಂಗ್ ಅವರು ಕೊನೆಯುಸಿರೆಳೆದರು ಎಂದು ರಾಜ್ಯದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ (ಗೃಹ) ಅವನೀಶ್ ಅವಶ್ತಿ ದೃಢಪಡಿಸಿದ್ದಾರೆ.ಗಂಭೀರ ಅನಾರೋಗ್ಯದಿಂದಿದ್ದ ಸಿಂಗ್ ಅವರು ಮಾರ್ಚ್ 15ರಿಂದ ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ವೆಂಟಿಲೇಟರ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ಗೃಹ ಸಚಿವ ಅಮಿತ್ ಶಾ ಸೇರಿದಂತೆ ಹಲವು ಬಿಜೆಪಿ ನಾಯಕರು ಕಳೆದ ರಾತ್ರಿ ಏಮ್ಸ್ ಆಸ್ಪತ್ರೆಗೆ ಭೇಟಿ ನೀಡಿ ಅವರ ಆರೋಗ್ಯ ವಿಚಾರಿಸಿದ್ದರು.