ನಿಮ್ಮ ಜೀನ್ ಜರ್ಮನಿಯ ನಾಜಿಯಲ್ಲಿರಬಹುದು, ನನ್ನ ಜೀನ್ ಈ ಮಣ್ಣಿನಲ್ಲಿದೆ: ಎಚ್‌.ಡಿ.ಕುಮಾರಸ್ವಾಮಿ ತಿರುಗೇಟು

ಬೆಂಗಳೂರು, ಜ.25 ,ನನ್ನನ್ನು ಅಪಮಾನಿಸುತ್ತಿರುವ ಬಿಜೆಪಿಗರೇ ಎಚ್ಚರ... ನಿಮ್ಮ ಜೀನ್ ಗಳು ಪಾಕಿಸ್ತಾನದಲ್ಲಿರಬಹುದು. ಅಥವಾ ಜರ್ಮನಿಯ ನಾಜಿಗಳಲ್ಲಿರಬಹುದು. ನನ್ನ‌ ಜೀನ್ ಈ ಮಣ್ಣಿನಲ್ಲಿದ. ನನ್ನನ್ನು ಕೊಲ್ಲಲೆತ್ನಿಸುವವರು ನವ ಉಗ್ರರು. ಅಪಮಾನಿಸಲು ಯತ್ನಿಸುತ್ತಿರುವವರು ಒಕ್ಕಲಿಗ ಅಸ್ಮಿತೆಯ ವಿರೋಧಿಗಳು ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಹರಿಹಾಯ್ದಿದ್ದಾರೆ.ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಅವರು, "ಒಕ್ಕಲಿಗ ಒಕ್ಕದಿದ್ದರೆ ಬಿಕ್ಕುವುದು ಜಗತ್ತು" ಎಂಬ ಕವಿವಾಣಿ ನೆನಪಿರಲಿ. ಅವರ ಪ್ರತಿನಿಧಿ ನಾನು. ರೈತರಿಗಾಗಿ ಕಾರ್ಯಕ್ರಮ ಹಮ್ಮಿಕೊಂಡವ ನಾನು. ನೀವು ನನ್ನನ್ನು ಕೊಲ್ಲಲಾದೀತೇ? ನನ್ನನ್ನು ಪಾಕಿಸ್ತಾನಿ ಎನ್ನುವಿರೇ? ಮುಂದೊಂದು ದಿನ ಪ್ರಾಯಶ್ಚಿತ ಪಡಲೆಂದೇ ಇಂದು ನೀವು ಮಾಡಿಕೊಳ್ಳುತ್ತಿರುವ ಪಾಪಗಳಿವು ಎಂದು ಟೀಕಿಸಿದ್ದಾರೆ.

ಒಕ್ಕಲಿಗರು ಹೋರಾಟಕ್ಕಿಳಿದರೆ, ಅಧಿಕಾರಕ್ಕೆ ಬಂದರೆ ಅವರನ್ನು ಬೆದರಿಸುವ, ಸರ್ಕಾರಗಳನ್ನು ಬೀಳಿಸುವ ಕಾಯಕ ಹಿಂದಿನಿಂದ ನಡೆದುಕೊಂಡು ಬಂದಿದೆ. ದೇವೇಗೌಡರಂಥವರ ಮೇಲೇ ಹಲ್ಲೆ ಪ್ರಯತ್ನಗಳು ನಡೆದಿವೆ. ಅವರಿಗೆ ಅಧಿಕಾರ ವಂಚಿಸಲು ಯತ್ನಿಸಿದ್ದನ್ನು ಸಮಾಜ ನೋಡಿದೆ. ಈಗ ಈ ಶಕ್ತಿಗಳು ನನ್ನ ವಿರುದ್ಧ ನಿಂತಿವೆ. ಇದಕ್ಕೆ ಬೆದರುವ ವ್ಯಕ್ತಿ ನಾನಲ್ಲ ಎಂದು ತಿರುಗೇಟು ನೀಡಿದ್ದಾರೆ.ಕರ್ನಾಟಕದಲ್ಲಿ ಒಕ್ಕಲಿಗ ನಾಯಕತ್ವದ ವಿರುದ್ಧ ಹಿಂದಿನಿಂದಲೂ ದೌರ್ಜನ್ಯ ರಾಜಕಾರಣ ಇದ್ದದ್ದೇ. ಮೂದಲಿಸುವುದು, ಸಲ್ಲದ ಆರೋಪ ಮಾಡುವುದು‌. ಈ ಹಿಂದೆ ನಡೆದ ತಂತ್ರಗಳು. ಆದರೆ ಈಗಿನ ಕೊಲ್ಲುವ ಸಂಚು, ಪಾಕಿಸ್ತಾನಿ ಪ್ರಯೋಗ ಒಕ್ಕಲಿಗ ರಾಜಕಾರಣದ ವಿರುದ್ಧ ನಡೆಯುತ್ತಿರುವ ಮತ್ತೊಂದು ಬಗೆಯ ದೌರ್ಜನ್ಯ ಎಂದು ಆರೋಪಿಸಿದ್ದಾರೆ.