ಯುವನಿಧಿ ಯೋಜನೆ: ವಿಶೇಷ ನೋಂದಣಿ ಅಭಿಯಾನ
ಬಳ್ಳಾರಿ 07:ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಯುವನಿಧಿ ಯೋಜನೆಯಡಿ ಜಿಲ್ಲೆಯಲ್ಲಿ ಅರ್ಹ ಪದವಿ ಮತ್ತು ಸ್ನಾತಕೋತ್ತರ ಪದವಿ ಪಡೆದ ನಿರುದ್ಯೋಗ ಅಭ್ಯರ್ಥಿಗಳು ನೋಂದಾಯಿಸಿಕೊಳ್ಳಲು ವಿಶೇಷ ನೋಂದಣಿ ಅಭಿಯಾನ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ತಿಳಿಸಿದ್ದಾರೆ.
ಕೌಶಲ್ಯಾಭಿವೃದ್ದಿ ಮತ್ತು ಕಾಲೇಜು ಶಿಕ್ಷಣ ಇಲಾಖೆ ಇವರ ಸಹಯೋಗದಲ್ಲಿ ಯುವನಿಧಿ ಯೋಜನೆಯ ವಿಶೇಷ ನೊಂದಣಿ ಅಭಿಯಾನವನ್ನು ಇಂದಿನಿಂದ ಜ.20 ರ ವರೆಗೆ ಬಳ್ಳಾರಿಯ ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯ ಆವರಣ ಮತ್ತು ಹಳೆಯ ತಾಲ್ಲೂಕು ಕಚೇರಿ ಆವರಣದ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಹಮ್ಮಿಕೊಳ್ಳಲಾಗಿದೆ.
2023-24 ಮತ್ತು 2024-25ನೇ ಸಾಲಿನಲ್ಲಿ ಪದವಿ, ಸ್ನಾತಕೋತ್ತರ ಪದವಿ, ಡಿಪ್ಲೋಮಾ ಕೋರ್ಸ್‌ಗಳಲ್ಲಿ ಉತ್ತೀರ್ಣರಾಗಿರುವ ಜಿಲ್ಲೆಯ ಎಲ್ಲಾ ಅರ್ಹ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ನೋಂದಣಿ ಮಾಡಿಸಿಕೊಳ್ಳಬೇಕು.
ಪದವಿ ಅಭ್ಯರ್ಥಿಗಳಿಗೆ ರೂ.3000 ಹಾಗೂ ಡಿಪ್ಲೋಮಾ ಉತ್ತೀರ್ಣರಾದ ಅಭ್ಯರ್ಥಿಗಳಿಗೆ ರೂ.1500 ಗಳನ್ನು ರಾಜ್ಯ ಸರ್ಕಾರವು ನಿರುದ್ಯೋಗ ಭತ್ಯೆಯಾಗಿ ನೀಡುತ್ತಿದೆ. ಅರ್ಹರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.