ಭಾರತ್ ಜೋಡೊ ಯುವ ಸಂಘದ ಸದಸ್ಯತ್ವಕ್ಕೆ ಯುವಜನರು ನೋಂದಾಯಿಸಿಕೊಳ್ಳಿ: ಕೆ.ಕೆ. ಗಾವಡೆ
Youth Urged to Register as Members of Bharat Jodo Youth Associations: K.K. Gawade
ಕಾಗವಾಡ, ಆ. 19: ಯುವಜನರಲ್ಲಿ ಕ್ರೀಡೆ, ಸಂಸ್ಕೃತಿ, ವೈಜ್ಞಾನಿಕ ಮನೋಭಾವ, ಸಮುದಾಯಿಕ ಹಾಗೂ ಸಾಮಾಜಿಕ ಸಾಮರಸ್ಯವನ್ನು ಉತ್ತೇಜಿಸುವ ಉದ್ದೇಶದಿಂದ ರಾಜ್ಯ ಸರ್ಕಾರ ಭಾರತ್ ಜೋಡೊ ಯುವ ಸಂಘಗಳನ್ನು ರಚಿಸಲು ಆದೇಶಿಸಿದೆ. ಶೇಡಬಾಳ ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಯುವಜನರು ಹೆಚ್ಚಿನ ಸಂಖ್ಯೆಯಲ್ಲಿ ಸಂಘಗಳ ಸದಸ್ಯತ್ವಕ್ಕೆ ನೋಂದಾಯಿಸಿಕೊಳ್ಳಬೇಕು ಎಂದು ಮುಖ್ಯಾಧಿಕಾರಿ ಕೆ.ಕೆ. ಗಾವಡೆ ಮನವಿ ಮಾಡಿದರು.
ಮಂಗಳವಾರ (ಆ. 18) ಪಟ್ಟಣ ಪಂಚಾಯಿತಿ ಕಚೇರಿಯಲ್ಲಿ ಮಾತನಾಡಿದ ಅವರು, ಯುವಜನರಲ್ಲಿ ನಾಯಕತ್ವ ಗುಣ, ಕ್ರೀಡಾಸಕ್ತಿ ಹಾಗೂ ಸಾಮಾಜಿಕ ಸೌಹಾರ್ದತೆ ಬೆಳೆಸುವ ಉದ್ದೇಶದಿಂದ ಸರ್ಕಾರ ಈ ಮಹತ್ವಾಕಾಂಕ್ಷಿ ಯೋಜನೆಯನ್ನು ಜಾರಿಗೆ ತಂದಿದೆ. ಯುವಜನರು ಸಂಘಗಳ ಸದಸ್ಯತ್ವ ಪಡೆದು ಯೋಜನೆಯ ಸದುಪಯೋಗ ಪಡೆದುಕೊಳ್ಳಬೇಕು ಎಂದು ಸಲಹೆ ನೀಡಿದರು.
ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಪ್ರತಿ 4 ಸಾವಿರ ಜನಸಂಖ್ಯೆಗೆ ಒಂದರಂತೆ ಯುವ ಸಂಘ ಸ್ಥಾಪಿಸಲಾಗುವುದು. ಸಂಘ ನೋಂದಣಿಯಾದ ಬಳಿಕ 15 ಸದಸ್ಯರ ಕಾರ್ಯಕಾರಿ ಸಮಿತಿಯನ್ನು ರಚಿಸಬೇಕು. ಇದರಲ್ಲಿ ಅಧ್ಯಕ್ಷ, ಉಪಾಧ್ಯಕ್ಷ ಹಾಗೂ ಖಜಾಂಚಿ ಸೇರಿದಂತೆ 12 ಮಂದಿ ಕಾರ್ಯಕಾರಿ ಸಮಿತಿ ಸದಸ್ಯರು ಇರಬೇಕು. ಅಧ್ಯಕ್ಷ ಅಥವಾ ಉಪಾಧ್ಯಕ್ಷ ಹುದ್ದೆಗಳಲ್ಲಿ ಯಾವುದಾದರೂ ಒಂದು ಹುದ್ದೆಯನ್ನು ಯುವತಿಗೆ ನೀಡುವುದು ಕಡ್ಡಾಯವಾಗಿದೆ. ಸಮಿತಿಯಲ್ಲಿ ಪರಿಶಿಷ್ಟ ಜಾತಿಗೆ 3 ಹಾಗೂ ಇತರ ಹಿಂದುಳಿದ ವರ್ಗಗಳಿಗೆ 4 ಸ್ಥಾನಗಳನ್ನು ಮೀಸಲಿಡಲಾಗಿದೆ ಎಂದು ಅವರು ತಿಳಿಸಿದರು.
16ರಿಂದ 35 ವರ್ಷದೊಳಗಿನ ಯುವಜನರು ಸಂಘದ ವೆಬ್‌ಸೈಟ್ ಮೂಲಕ ಆನ್‌ಲೈನ್‌ನಲ್ಲಿ ಸದಸ್ಯತ್ವಕ್ಕೆ ನೋಂದಾಯಿಸಿಕೊಳ್ಳಬಹುದು. ಸದಸ್ಯತ್ವಕ್ಕೆ ₹10 ಶುಲ್ಕ ನಿಗದಿಪಡಿಸಲಾಗಿದ್ದು, ಒಬ್ಬರು ಒಂದು ಸಂಘಕ್ಕೆ ಮಾತ್ರ ಸದಸ್ಯರಾಗಲು ಅವಕಾಶವಿದೆ. ಪ್ರತಿ ಸಂಘದ ರಚನೆಗೆ ಕನಿಷ್ಠ 100 ಯುವಕರ ಸದಸ್ಯತ್ವ ಕಡ್ಡಾಯವಾಗಿದೆ. ಪ್ರತಿ ಸಂಘಕ್ಕೆ ವಾರ್ಷಿಕ ₹10 ಲಕ್ಷ ಅನುದಾನ ಹಾಗೂ ತರಬೇತುದಾರರಿಗೆ ವಾರ್ಷಿಕ ₹24 ಸಾವಿರ ಗೌರವಧನ ನೀಡಲಾಗುವುದು ಎಂದು ಗಾವಡೆ ವಿವರಿಸಿದರು.
ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಮೂಲಕ ಯೋಜನೆಯನ್ನು ಅನುಷ್ಠಾನಗೊಳಿಸಲಾಗುವುದು. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್, ನಗರಾಭಿವೃದ್ಧಿ, ಕಂದಾಯ ಹಾಗೂ ಶಿಕ್ಷಣ ಇಲಾಖೆಗಳು ಸಹಕಾರ ನೀಡಲಿವೆ. ಭಾರತ್ ಜೋಡೊ ಯುವ ಸಂಘಗಳ ಮೂಲಕ ಯುವಜನರಲ್ಲಿ ನಾಯಕತ್ವ ಗುಣಗಳನ್ನು ಬೆಳೆಸಿ, ಅವರನ್ನು ಸಬಲೀಕರಣಗೊಳಿಸಿ ನಾಡಿನ ಸತ್ಪ್ರಜೆಗಳಾಗಿ ರೂಪಿಸುವುದು ಯೋಜನೆಯ ಮುಖ್ಯ ಉದ್ದೇಶವಾಗಿದೆ ಎಂದು ಅವರು ಹೇಳಿದರು.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 