ಬೆಳಗಾವಿ, ಏ 17 ಬೆಳಗಾವಿ ಮತ್ತು ಚಿಕ್ಕೋಡಿ ಲೋಕಸಭಾ ಕ್ಷೇತ್ರಗಳ ಕಾಂಗ್ರೆಸ್ ಅಭ್ಯರ್ಥಿಗಳ ವಿರುದ್ಧ ಕೆಲಸ ಮಾಡಿದ್ದಕ್ಕಾಗಿ ಬಂಡಾಯ ಕಾಂಗ್ರೆಸ್ ಶಾಸಕ ರಮೇಶ್ ಜಾರಕಿಹೊಳಿ ವಿರುದ್ಧ ಕಾಂಗ್ರೆಸ್ ಹೈಕಮಾಂಡ್ ಶಿಸ್ತು ಕ್ರಮ ಜರುಗಿಸುವ ಸಾಧ್ಯತೆ ಇದೆ.
ಬೆಳಗಾವಿ ಲೋಕಸಭಾ ಕ್ಷೇತ್ರದ ಕೊಲವಿ ಗ್ರಾಮದಲ್ಲಿ ಚುನಾವಣಾ ಪ್ರಚಾರ ಸಭೆಯನ್ನು ಉದ್ದೇಶಿಸಿ ಮಾತನಾಡಿದ ರಮೇಶ್ ಜಾರಕಿಹೊಳಿ ಅವರ ಸಹೋದರರೂ ಆದ ಅರಣ್ಯ ಸಚಿವ ಸತೀಶ್ ಜಾರಕಿಹೊಳಿ, ಚಿಕ್ಕೋಡಿ ಮತ್ತು ಬೆಳಗಾವಿ ಲೋಕಸಭಾ ಕ್ಷೇತ್ರಗಳ ಕಾಂಗ್ರೆಸ್ಅಭ್ಯರ್ಥಿಗಳ ವಿರುದ್ಧ ಕೆಲಸ ಮಾಡಿದ ಆರೋಪದಲ್ಲಿ ರಮೇಶ್ ವಿರುದ್ಧ ಪಕ್ಷದ ಹೈಕಮಾಂಡ್ಗೆ ದೂರು ಸಲ್ಲಿಸಲಾಗಿದೆ ಎಂದು ತಿಳಿಸಿದರು.
ಇತ್ತೀಚೆಗೆ ರಾಜ್ಯ ಸಚಿವ ಸಂಪುಟದಿಂದ ಕೈಬಿಟ್ಟಿದ್ದರಿಂದ ರಮೇಶ್ ಜಾರಕಿಹೊಳಿ ಅವರು ಅಸಮಾಧಾನಗೊಂಡಿದ್ದು, ಪಕ್ಷದ ಚಿಕ್ಕೋಡಿ ಮತ್ತು ಬೆಳಗಾವಿ ಕ್ಷೇತ್ರಗಳ ಪಕ್ಷಗಳ ಅಭ್ಯರ್ಥಿಗಳ ವಿರುದ್ಧ ಕೆಲಸ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.
ರಮೇಶ್ ಅವರು ಪಕ್ಷದಲ್ಲಿ ಸಕ್ರಿಯವಾಗಿಲ್ಲ. ಗೋಕಾಕ್ ಕ್ಷೇತ್ರದಲ್ಲಿ ಪರ್ಯಾಯ ನಾಯಕತ್ವ ಸೃಷ್ಟಿಸಲು ನಾವು ಪ್ರಯತ್ನಿಸುತ್ತಿದ್ದೇವೆ ಎಂದು ಸಚಿವರು ತಿಳಿಸಿದರು.
ಉಭಯ ಕ್ಷೇತ್ರಗಳಲ್ಲೂ ರಮೇಶ್ ಜಾರಕಿಹೊಳಿ ಬಿಜೆಪಿ ಅಭ್ಯರ್ಥಿಗಳಿಗೆ ಬೆಂಬಲ ನೀಡುತ್ತಿದ್ದಾರೆ. ಈ ಬಗ್ಗೆ ಪಕ್ಷದ ಹೈಕಮಾಂಡ್ಗೆ ಜಿಲ್ಲಾ ಕಾಂಗ್ರೆಸ್ ಸಮಿತಿ ಈಗಾಗಲೇ ದೂರು ನೀಡಿದೆ ಎಂದು ಅವರು ತಿಳಿಸಿದರು .