ಡಾ. ಮಹಾಂತ ಶಿವಯೋಗಿಗಳ ಜಯಂತಿ ಅಂಗವಾಗಿ ‘ವ್ಯಸನ ಮುಕ್ತ ದಿನಾಚರಣೆ’
‘Addiction-Free Day’ observed on the occasion of Dr. Mahanta Shivayogi’s Jayanti
ಲೋಕದರ್ಶನ ವರದಿ
ಬಳ್ಳಾರಿ, ಆ. 2: ಯುವಜನತೆ ಎಲ್ಲ ರೀತಿಯ ವ್ಯಸನಗಳಿಂದ ದೂರವಿದ್ದಾಗ ಮಾತ್ರ ಡಾ. ಮಹಾಂತ ಶಿವಯೋಗಿಗಳು ಪ್ರತಿಪಾದಿಸಿದ ಆದರ್ಶಗಳು ಹಾಗೂ ಅವರ ಸಂಕಲ್ಪಕ್ಕೆ ನಿಜವಾದ ಅರ್ಥ ಸಿಗುತ್ತದೆ ಎಂದು ಬಳ್ಳಾರಿ ಮಹಾನಗರ ಪಾಲಿಕೆ ಮೇಯರ್ ಪಿ. ಗಾದೆಪ್ಪ ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಕರ್ನಾಟಕ ಮದ್ಯಪಾನ ಸಂಯಮ ಮಂಡಳಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಗಳ ಸಂಯುಕ್ತಾಶ್ರಯದಲ್ಲಿ ಡಾ. ಮಹಾಂತ ಶಿವಯೋಗಿಗಳ ಜಯಂತಿ ಅಂಗವಾಗಿ ನಗರದ ಡಾ. ರಾಜ್ಕುಮಾರ್ ರಸ್ತೆಯ ಸಾಂಸ್ಕೃತಿಕ ಸಮುಚ್ಚಯದಲ್ಲಿ ಶನಿವಾರ ಆಯೋಜಿಸಿದ್ದ ‘ವ್ಯಸನ ಮುಕ್ತ ದಿನಾಚರಣೆ’ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಇತ್ತೀಚಿನ ದಿನಗಳಲ್ಲಿ ಯುವಕರು ಹಾಗೂ ವಿದ್ಯಾರ್ಥಿಗಳು ವಿವಿಧ ದುಶ್ಚಟಗಳಿಗೆ ಬಲಿಯಾಗುತ್ತಿರುವುದು ಕಳವಳಕಾರಿ ಬೆಳವಣಿಗೆಯಾಗಿದೆ. ಪ್ರತಿಯೊಬ್ಬ ಯುವಕ-ಯುವತಿಯೂ ವ್ಯಸನಮುಕ್ತ ಜೀವನ ನಡೆಸುವ ಸಂಕಲ್ಪ ಮಾಡಬೇಕು. ತಮ್ಮ ಸ್ನೇಹಿತರು ಹಾಗೂ ಸಹಪಾಠಿಗಳನ್ನೂ ವ್ಯಸನದಿಂದ ದೂರವಿರುವಂತೆ ಪ್ರೇರೇಪಿಸಬೇಕು ಎಂದು ಕರೆ ನೀಡಿದರು.
ಡಾ. ಮಹಾಂತ ಶಿವಯೋಗಿಗಳು ಸಮಾಜವನ್ನು ದುಶ್ಚಟಗಳಿಂದ ಮುಕ್ತಗೊಳಿಸಲು ನಡೆಸಿದ ಜಾಗೃತಿ ಅಭಿಯಾನವನ್ನು ಸ್ಮರಿಸಿದ ಅವರು, ಅವರ ಆದರ್ಶಗಳನ್ನು ಇಂದಿನ ಪೀಳಿಗೆ ಅಳವಡಿಸಿಕೊಳ್ಳುವುದು ಅಗತ್ಯವಾಗಿದೆ ಎಂದು ಹೇಳಿದರು.
ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಕೆ.ಇ. ಚಿದಾನಂದಪ್ಪ ಮಾತನಾಡಿ, ಮದ್ಯಪಾನ, ಜೂಜು, ಮಾದಕ ವಸ್ತುಗಳು ಮಾತ್ರವಲ್ಲದೆ ಮೊಬೈಲ್ ವ್ಯಸನವೂ ಇಂದಿನ ಸಮಾಜಕ್ಕೆ ದೊಡ್ಡ ಸವಾಲಾಗಿದೆ. ಯುವಕರು ಆತ್ಮನಿಯಂತ್ರಣ ಬೆಳೆಸಿಕೊಂಡು ಉತ್ತಮ ಜೀವನ ಮೌಲ್ಯಗಳನ್ನು ಅಳವಡಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಶ್ರೀ ಸತ್ಯಂ ಶಿಕ್ಷಣ ಮಹಾವಿದ್ಯಾಲಯದ ಸಹಾಯಕ ಪ್ರಾಧ್ಯಾಪಕ ಅಲಂಭಾಷ ವಿಶೇಷ ಉಪನ್ಯಾಸ ನೀಡಿ, ಪುಸ್ತಕ ಜ್ಞಾನ ಮಾತ್ರ ಸಾಕಾಗುವುದಿಲ್ಲ. ಕಲಿತ ವಿಚಾರಗಳನ್ನು ಜೀವನದಲ್ಲಿ ಅಳವಡಿಸಿಕೊಂಡಾಗಲೇ ಶಿಕ್ಷಣಕ್ಕೆ ಅರ್ಥ ಸಿಗುತ್ತದೆ ಎಂದು ಹೇಳಿದರು.
13ರಿಂದ 18 ವರ್ಷದ ವಯಸ್ಸು ಅತ್ಯಂತ ಸೂಕ್ಷ್ಮ ಘಟ್ಟವಾಗಿದ್ದು, ಈ ಹಂತದಲ್ಲಿ ಯುವಜನತೆ ಸಾಮಾಜಿಕ ಜಾಲತಾಣಗಳು ಹಾಗೂ ವಿವಿಧ ವ್ಯಸನಗಳ ಆಕರ್ಷಣೆಗೆ ಒಳಗಾಗದಂತೆ ಎಚ್ಚರಿಕೆ ವಹಿಸಬೇಕು ಎಂದು ಅವರು ತಿಳಿಸಿದರು.
ಕಾರ್ಯಕ್ರಮದಲ್ಲಿ ಕುಮಾರಿ ತಸ್ಮಿಯಾ ಅನ್ನಪೂರ್ಣ ಹಾಗೂ ತಂಡದಿಂದ ವಚನ ಗಾಯನ ನಡೆಯಿತು. ಸಂವಿಧಾನದ ಪ್ರಸ್ತಾವನೆಯನ್ನು ಬೋಧಿಸಲಾಯಿತು. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಬಿ. ನಾಗರಾಜ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಅಧಿಕಾರಿಗಳು, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಶಿವಾನಂದ ಪೂಜಾರಿ, ವಿವಿಧ ಕಾಲೇಜುಗಳ ಉಪನ್ಯಾಸಕರು, ಎನ್‌ಎಸ್‌ಎಸ್ ಸ್ವಯಂಸೇವಕರು, ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.
ಜಾಗೃತಿ ಜಾಥಾ:
ಕಾರ್ಯಕ್ರಮಕ್ಕೂ ಮುನ್ನ ಡಾ. ಮಹಾಂತ ಶಿವಯೋಗಿಗಳ ಜಯಂತಿ ಅಂಗವಾಗಿ ನಗರದ ಪ್ರಮುಖ ರಸ್ತೆಗಳಲ್ಲಿ ವ್ಯಸನಮುಕ್ತಿಯ ಕುರಿತು ಜಾಗೃತಿ ಜಾಥಾ ನಡೆಸಲಾಯಿತು. ವಿದ್ಯಾರ್ಥಿಗಳು ವ್ಯಸನದ ದುಷ್ಪರಿಣಾಮಗಳ ಕುರಿತು ಅರಿವು ಮೂಡಿಸುವ ಘೋಷಣೆಗಳು ಹಾಗೂ ಫಲಕಗಳನ್ನು ಪ್ರದರ್ಶಿಸಿ ಸಾರ್ವಜನಿಕರ ಗಮನ ಸೆಳೆದರು.
ಎಚ್ಚರ ಅನಾಹುತಕ್ಕೆ ಕೈ ಮಾಡಿ ಕರೆಯುತ್ತಿದೆ: ರಸ್ತೆಯ ಭೂಗತ ವಿದ್ಯುತ್ ತಂತಿಯಿಂದ ಹೊರಬರುತ್ತಿದೆ ಬೆಂಕಿ ಕಿಡಿ-ಹೊಗೆ
ಹುಕ್ಕೇರಿ ತಾಲೂಕಿನ ಅತಿ ಹಿರಿಯ 107 ವಯಸ್ಸಿನ ನಾಗರಿಕ ನಿಜಪ್ಪ ಜಾಡರ್ ವಿಧಿವಶ
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ
ಗಾಂಜಾ ಮಾರಾಟ : ಕೊಲೆ ಪ್ರಕರಣದಲ್ಲಿ ತಲೆಮರಿಸಿಕೊಂಡಿದ್ದ ಆರೋಪಿತನ ಬಂಧನ 