ಬೆಂಡಿಗೇರಿಯಲ್ಲಿ ‘ಪ್ರಜಾಸೇವೆ’ ಆಂದೋಲನ

ಬೆಂಡಿಗೇರಿಯಲ್ಲಿ ‘ಪ್ರಜಾಸೇವೆ’ ಆಂದೋಲನ  ‘Praja Seve’ (Public Service) Campaign in Bendigeri


 ಬೆಳಗಾವಿ  26: ಸರ್ಕಾರದ ವಿವಿಧ ಯೋಜನೆಗಳು ಹಾಗೂ ಸೌಲಭ್ಯಗಳನ್ನು ಅರ್ಹ ಫಲಾನುಭವಿಗಳಿಗೆ ತಲುಪಿಸುವ ಜೊತೆಗೆ, ಗ್ರಾಮೀಣ ಜನರ ಸಮಸ್ಯೆಗಳನ್ನು ಸ್ಥಳದಲ್ಲೇ ಆಲಿಸಿ ಪರಿಹರಿಸುವ ಉದ್ದೇಶದಿಂದ ಬೆಂಡಿಗೇರಿ ಗ್ರಾಮದಲ್ಲಿ ‘ಪ್ರಜಾಸೇವೆ ಆಂದೋಲನ’ ಕಾರ್ಯಕ್ರಮ ಆಯೋಜಿಸಲಾಗಿತ್ತು.   

 ಬೆಳಗಾವಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ತಾಲೂಕು ಆಡಳಿತದ ಸಂಯುಕ್ತ ಆಶ್ರಯದಲ್ಲಿ ನಡೆದ ಕಾರ್ಯಕ್ರಮವನ್ನು ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಉದ್ಘಾಟಿಸಿದರು.  

 ಈ ಸಂದರ್ಭದಲ್ಲಿ ಮಾತನಾಡಿದ ಅವರು, ಗ್ರಾಮೀಣ ಜನರು ಸಮಸ್ಯೆಗಳ ಪರಿಹಾರಕ್ಕಾಗಿ ತಾಲೂಕು ಹಾಗೂ ಜಿಲ್ಲಾ ಕೇಂದ್ರಗಳಿಗೆ ಪದೇಪದೇ ಅಲೆದಾಡುವುದನ್ನು ತಪ್ಪಿಸಿ, ಆಡಳಿತವೇ ಜನರ ಬಳಿಗೆ ತೆರಳಿ ಅಹವಾಲುಗಳನ್ನು ಆಲಿಸುವುದು ಕಾರ್ಯಕ್ರಮದ ಉದ್ದೇಶವಾಗಿದೆ ಎಂದರು.  

 ವಿವಿಧ ಇಲಾಖೆಗಳ ಅಧಿಕಾರಿಗಳು ಒಂದೇ ವೇದಿಕೆಯಲ್ಲಿ ಲಭ್ಯವಿದ್ದರಿಂದ ಗ್ರಾಮಸ್ಥರು ತಮ್ಮ ಸಮಸ್ಯೆಗಳನ್ನು ನೇರವಾಗಿ ಅಧಿಕಾರಿಗಳ ಗಮನಕ್ಕೆ ತಂದರು. ಸರ್ಕಾರಿ ಯೋಜನೆಗಳ ಮಾಹಿತಿ, ಅರ್ಹತೆ ಹಾಗೂ ಅರ್ಜಿ ಸಲ್ಲಿಕೆ ಕುರಿತು ಅಧಿಕಾರಿಗಳು ಮಾರ್ಗದರ್ಶನ ನೀಡಿದರು.  

 ಸರ್ಕಾರದ ಯೋಜನೆಗಳ ಪ್ರಯೋಜನ ಅರ್ಹ ಫಲಾನುಭವಿಗಳಿಗೆ ತಲುಪುವುದು ಮುಖ್ಯವಾಗಿದ್ದು, ಯೋಜನೆಗಳಿಂದ ವಂಚಿತರಾದವರನ್ನು ಗುರುತಿಸಿ ಸೌಲಭ್ಯ ಕಲ್ಪಿಸಲು ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದು ಚನ್ನರಾಜ ಹಟ್ಟಿಹೊಳಿ ಹೇಳಿದರು.  

 ಕಾರ್ಯಕ್ರಮದಲ್ಲಿ ವಿವಿಧ ಇಲಾಖೆಗಳ ತಾಲೂಕು ಮಟ್ಟದ ಅಧಿಕಾರಿಗಳು ಹಾಗೂ ಸಿಬ್ಬಂದಿ ಭಾಗವಹಿಸಿದ್ದರು. ಬೆಂಡಿಗೇರಿ ಮತ್ತು ಸುತ್ತಮುತ್ತಲಿನ ಗ್ರಾಮಗಳ ಸಾರ್ವಜನಿಕರು, ಹಿರಿಯರು, ಮುಖಂಡರು ಹಾಗೂ ಗಣ್ಯರು ಉಪಸ್ಥಿತರಿದ್ದು, ಸ್ಥಳೀಯ ಸಮಸ್ಯೆಗಳನ್ನು ಅಧಿಕಾರಿಗಳ ಗಮನಕ್ಕೆ ತಂದರು.