ಕಾರವಾರ 12 :- ವಿಶ್ವಪರಿಸರ ದಿನಾಚರಣೆ-2025 ರನ್ವಯ ಘೋಷವಾಕ್ಯವಾದ “ಪ್ಲಾಸ್ಟಿಕ್ ಮಾಲಿನ್ಯವನ್ನು ಕೊನೆಗೊಳಿಸುವುದು” ವಿಷಯದ ಕುರಿತು ಗುರುವಾರ , ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ, ಪ್ರಾದೇಶಿಕ ಕಛೇರಿ ಕಾರವಾರ ಹಾಗೂ ಮೆ. ವೆಸ್ಟ್ ಕೋಸ್ಟ್ ಪೇಪರ್ ಮಿಲ್ಸ್ ಲಿ., ದಾಂಡೇಲಿ ಇವರ ಸಹಯೋಗದೊಂದಿಗೆ ಮೆ. ವೆಸ್ಟ್ ಕೋಸ್ಟ್ ಪೇಪರ್ ಮಿಲ್ಸ್ ಲಿ., ದಾಂಡೇಲಿ ಇಲ್ಲಿ ಪರಿಸರ ಜಾಗೃತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.
ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಪರಿಸರ ಅಧಿಕಾರಿ ಬಿ.ಕೆ. ಸಂತೋಷ್ ಹಾಜರಿದ್ದು, ಕಂಪನಿಯ ಅಧಿಕಾರಿ ಹಾಗೂ ಸಿಬ್ಬಂದಿಗಳಿಗೆ ಏಕ ಬಳಕೆಯ ಪ್ಲಾಸ್ಟಿಕ್ ವಸ್ತುಗಳ ಬಳಕೆಯಿಂದ ಪರಿಸರದ ಮೇಲೆ ಆಗುವ ದುಷ್ಪ್ಪರಿಣಾಮಗಳು ಹಾಗೂ ಪ್ಲಾಸ್ಟಿಕ್ ತ್ಯಾಜ್ಯಗಳ ನಿರ್ವಹಣೆ ವಿಲೇವಾರಿ ಬಗ್ಗೆ ತಿಳಿಸಿದರು.
ನಿಷೇಧಿತ ಏಕ ಬಳಕೆಯ ಪ್ಲಾಸ್ಟಿಕ್ ವಸ್ತುಗಳನ್ನು (ಪ್ಲಾಸ್ಟಿಕ್ ಕ್ಯಾರಿ ಬ್ಯಾಗ್, ಪ್ಲಾಸ್ಟಿಕ್ ಭಿತ್ತಿಪತ್ರ, ಪ್ಲಾಸ್ಟಿಕ್ ತೋರಣ, ಪ್ಲೆಕ್ಸ್, ಬಾವುಟ, ಪ್ಲಾಸ್ಟಿಕ್ ತಟ್ಟೆ, ಪ್ಲಾಸ್ಟಿಕ್ ಲೋಟ, ಪ್ಲಾಸ್ಟಿಕ್ ಚಮಚ, ಸ್ಟ್ರಾಗಳು, ಮತ್ತು ಊಟದ ಮೇಜಿನ ಮೇಲೆ ಹರಡುವ ಪ್ಲಾಸ್ಟಿಕ್ ಹಾಳೆ ಹಾಗೂ ಥರ್ಮೊಕಾಲ್ ಮತ್ತು ಪ್ಲಾಸ್ಟಿಕ್ ಮೈಕ್ರೋ ಬೀಡ್ಸ್ ನಿಂದ ತಯಾರಾದಂತಹ ವಸ್ತುಗಳು) ಉಪಯೋಗಿಸದಂತೆ ಜಾಗೃತಿ ಮೂಡಿಸಿ, ಏಕ ಬಳಕೆಯ ಪ್ಲಾಸ್ಟಿಕ್ ವಸ್ತುಗಳ ಉಪಯೋಗವನ್ನು ಸಂಪೂರ್ಣವಾಗಿ ನಿಷೇಧಿಸಿ ಬದಲಾಗಿ ಅಡಿಕೆ ಎಲೆ / ಕಟ್ಟಿಗೆ / ಗಾಜು / ಪೇಪರ್ / ಸ್ಟೀಲ್ನಿಂದ ತಯಾರಿಸಿದ ವಸ್ತುಗಳನ್ನು ಬಳಸುವಂತೆ ಬಟ್ಟೆ ಚೀಲಗಳನ್ನು ಬಳಸುವಂತೆ ಹಾಗೂ ಪ್ಲಾಸ್ಟಿಕ್ ಚೀಲಗಳನ್ನು ಬಳಸಿದಲ್ಲಿ ದಂಡವನ್ನು ವಿಧಿಸಲಾಗುವುದು ಎಂದು ತಿಳಿಸಲಾಯಿತು.
ಕಾರ್ಯಕ್ರಮದಲ್ಲಿ ಏಕ ಬಳಕೆ ಪ್ಲಾಸ್ಟಿಕ್ ನಿಷೇಧ ಕುರಿತು ಕರಪತ್ರ ಬಿಡುಗಡೆಗೊಳಿಸಲಾಯಿತು. ಎಲ್ಲರಿಗೂ ಬಟ್ಟೆ ಚೀಲಗಳನ್ನು ವಿತರಿಸಲಾಯಿತು. ಜಾಗೃತಿ ಕಾರ್ಯಕ್ರಮದ ಅಂಗವಾಗಿ ಕಂಪನಿಯ ಆವರಣದಲ್ಲಿ ಸಸಿ ನೆಡುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.
ಜಾಗೃತಿ ಕಾರ್ಯಕ್ರಮದಲ್ಲಿ ಕಂಪನಿಯ ಅಧಿಕಾರಿ ರಾಜೇಂದ್ರ ಜೈನ, ಎಕ್ಸಿಕ್ಯೂಟಿವ್ ಡೈರೆಕ್ಟರ್ ಅಶೋಕ ಶರ್ಮಾ, ಸಿನಿಯರ್ ವೈಸ್ ಪ್ರೆಸಿಡೆಂಟ್ ರವಿಗೌತಮ, ವೈಸ್ ಪ್ರೆಸಿಡೆಂಟ್ ಭುಪೆಂದ್ರ ಸಿಂಗ್, ಅಸಿಸ್ಟೆಂಟ್ ವೈಸ್ ಪ್ರೆಸಿಡೆಂಟ್ ರಾಘವೇಂದ್ರ ಜೆ., ಮತ್ತಿತರರು ಹಾಜರಿದ್ದರು.